ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚಸೋಟಿ ಪ್ರದೇಶದಲ್ಲಿ ಭಾರಿ ಮೇಘಸ್ಫೋಟ ಉಂಟಾಗಿ ಇಬ್ಬರು ಸಿಐಎಸ್‌ಎಫ್ ಜವಾನರು ಸೇರಿದಂತೆ 33 ಜನರು ಸಾವನ್ನಪ್ಪಿದ್ದು, 120 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ.
ಮಚೈಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಹಿಮಾಲಯದ ಮಾತಾ ಚಂಡಿ ದೇಗುಲಕ್ಕೆ ಹೋಗುವ ವಾಹನ ಸಂಚಾರಕ್ಕೆ ಯೋಗ್ಯವಾದ ಕೊನೆಯ ಗ್ರಾಮವಾದ ಚಸೋಟಿಯಲ್ಲಿ ಈ ದುರಂತ ಸಂಭವಿಸಿದೆ. ಯಾತ್ರಾರ್ಥಿಗಳ ದಟ್ಟಣೆ, ನಿರಂತರ ಮಳೆಯಿಂದಾಗಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ತೀರ್ಥಯಾತ್ರೆಯ ಹಾದಿ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಚಶೋತಿ ಗ್ರಾಮದ ಮಚೈಲ್ ಮಾತಾ ದೇವಸ್ಥಾನದ ಬಳಿ ಇರುವ ವಾಹನ ನಿಲುಗಡೆ ಸ್ಥಳ, ಲಂಗರ್‌ನಲ್ಲಿ ಭಕ್ತರು ಊಟ ಮಾಡುತ್ತಿದ್ದರು. ಈ ವೇಳೆ ಭಾರೀ ಶಬ್ದದೊಂದಿಗೆ ಏಕಾಏಕಿ ಪ್ರವಾಹ ನುಗಿದ್ದು, ಅನೇಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.
ಮೇಘಸ್ಫೋಟ ಸಂಭವಿಸಿದ ಸ್ಥಳದಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು. 120 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ದುರಂತದಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಲು ಸ್ಥಳದಲ್ಲಿ ರಕ್ಷಣಾ ತಂಡಗಳು ಅವಿಶ್ರಾಂತವಾಗಿ ಕೆಲಸ ಮಾಡುತ್ತಿವೆ. ಜನರನ್ನು ಅಲ್ಲಿಂದ ಸ್ಥಳಾಂತರಿಸಲು ಹಾಗೂ ವೈದ್ಯಕೀಯ ನೆರವು ನೀಡಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇವೆ ಎಂದು ಕಿಶ್ತ್ವಾರ್ ಡಿಡಿಸಿ ಅಧ್ಯಕ್ಷೆ ಪೂಜಾ ಠಾಕೂರ್ ಹೇಳಿದ್ದಾರೆ.
ಈ ಕುರಿತಂತೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ನಾನು ಈಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದೆ. ಜಮ್ಮುವಿನ ಕಿಶ್ತ್ವಾರ್ ಪ್ರದೇಶದಲ್ಲಿನ ಪರಿಸ್ಥಿತಿಯ ಬಗ್ಗೆ ಅವರಿಗೆ ವಿವರಿಸಿದ್ದೇನೆ. ಮೇಘಸ್ಫೋಟದಿಂದ ಹಾನಿಗೊಳಗಾದ ಪ್ರದೇಶದ ಮಾಹಿತಿ ನಿಧಾನವಾಗಿ ತಲುಪುತ್ತಿದೆ. ರಕ್ಷಣಾ ಕಾರ್ಯಾಚರಣೆಗಳನ್ನು ನಿರ್ವಹಿಸಲು ಜೆ & ಕೆ ಒಳಗೆ ಮತ್ತು ಹೊರಗೆ ಸಾಧ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಸಜ್ಜುಗೊಳಿಸಲಾಗುತ್ತಿದೆ. ನಾನು ಚಾನೆಲ್‌ಗಳು ಅಥವಾ ಸುದ್ದಿ ಸಂಸ್ಥೆಗಳೊಂದಿಗೆ ಮಾತನಾಡುವುದಿಲ್ಲ. ಸರ್ಕಾರವು ಸಾಧ್ಯವಾದಷ್ಟು ಮಾಹಿತಿಯನ್ನು ಹಂಚಿಕೊಳ್ಳುತ್ತದೆ” ಎಂದು ಹೇಳಿದ್ದಾರೆ.
ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಕಿಶ್ತ್ವಾರ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದೇನೆ. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಎನ್‌ಡಿಆರ್‌ಎಫ್ ತಂಡಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿವೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಪ್ರತಿಯೊಂದು ಪರಿಸ್ಥಿತಿಯಲ್ಲೂ ಜಮ್ಮು ಮತ್ತು ಕಾಶ್ಮೀರದ ಜನರೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಅಗತ್ಯವಿರುವ ಜನರಿಗೆ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಲಾಗಿದೆ.” ಎಂದು ಹೇಳಿದ್ದಾರೆ.
ಸದ್ಯ ಚಶೋತಿ ಗ್ರಾಮದಲ್ಲಿ ಹವಾಮಾನ ಹದಗೆಟ್ಟಿದೆ ಅಲ್ಲದೇ ರಸ್ತೆಗಳಿಗೂ ಹಾನಿಯಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರಂತದ ಬಳಿಕ ದೇವಾಲಯಕ್ಕೆ ವಾರ್ಷಿಕ ಯಾತ್ರೆ ಸ್ಥಗಿತಗೊಳಿಸಲಾಗಿದೆ.
3jjjoa