SK Home Ad
Home ಸುದ್ದಿ ದೇಶ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ; ಮರ್ಮಾಂಗ ಕತ್ತರಿಸಿದ ತಾಯಿ

ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ; ಮರ್ಮಾಂಗ ಕತ್ತರಿಸಿದ ತಾಯಿ

0
112

ಅನಂತಪುರ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ತನ್ನ ಪ್ರಿಯಕರನ ಮರ್ಮಾಂಗವನ್ನು ತಾಯಿಯೊಬ್ಬರು ಚಾಕುವಿನಿಂದ ಕತ್ತರಿಸಿದ ಘಟನೆ ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆಟೋ ಚಾಲಕ ಸುರೇಶ್ ಎಂಬಾತ ಸ್ಥಳೀಯ ಡ್ರೈವರ್ಸ್ ಕಾಲೋನಿಯಲ್ಲಿ ವಾಸಿಸುತ್ತಿರುವ ಮಹಿಳೆಯೊಂದಿಗೆ ಕಳೆದ ಐದು ವರ್ಷಗಳಿಂದ ಸಂಬಂಧ ಹೊಂದಿದ್ದನು. ಇತ್ತೀಚೆಗೆ ಆತ ಮಹಿಳೆಯ 17 ವರ್ಷದ ಅಪ್ರಾಪ್ತ ಮಗಳ ಮೇಲೆಯೂ ಲೈಂಗಿಕ ಕಿರುಕುಳ ನೀಡಲು ಯತ್ನಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ಹಲವು ಬಾರಿ ತಾಯಿಗೆ ಮಾಹಿತಿ ನೀಡಿದ್ದು, ಮಹಿಳೆ ಸುರೇಶ್‌ಗೆ ಎಚ್ಚರಿಕೆ ನೀಡಿದ್ದರೂ ಆತ ತನ್ನ ವರ್ತನೆಯನ್ನು ಬದಲಿಸಿರಲಿಲ್ಲ ಎಂದು ತಿಳಿದುಬಂದಿದೆ.

ಘಟನೆಯ ದಿನ ರಾತ್ರಿ ಸುರೇಶ್ ಎಂದಿನಂತೆ ಮಹಿಳೆಯ ಮನೆಗೆ ಬಂದಿದ್ದ. ಮಧ್ಯರಾತ್ರಿ ಮಹಿಳೆ ಶೌಚಾಲಯಕ್ಕೆ ತೆರಳಿದ್ದ ವೇಳೆ, ಆತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಬಾಲಕಿ ಜೋರಾಗಿ ಕಿರುಚಾಡುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ತಾಯಿ, ಸುರೇಶ್‌ನನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೂ ಆತ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಮಹಿಳೆ ಚಾಕುವಿನಿಂದ ಆತನ ಮರ್ಮಾಂಗದ ಮೇಲೆ ಹಲ್ಲೆ ನಡೆಸಿದ್ದಾಳೆ.

ಗಂಭೀರವಾಗಿ ಗಾಯಗೊಂಡ ಸುರೇಶ್ ರಕ್ತಸ್ರಾವದಿಂದ ಕುಸಿದು ಬಿದ್ದಿದ್ದು, ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ. ಬಾಲಕಿಯ ಹೇಳಿಕೆ ಹಾಗೂ ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.