SK Home Ad
Home ಸುದ್ದಿ ದೇಶ NEET Protest: ವಿದ್ಯಾರ್ಥಿಗಳ ವಿರುದ್ಧದ FIR ರದ್ದು, ಸುಪ್ರೀಂ ಕೋರ್ಟ್ ಮಹತ್ವದ ಆದೇಶ

NEET Protest: ವಿದ್ಯಾರ್ಥಿಗಳ ವಿರುದ್ಧದ FIR ರದ್ದು, ಸುಪ್ರೀಂ ಕೋರ್ಟ್ ಮಹತ್ವದ ಆದೇಶ

0
71

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ಆರೋಪದಡಿ ಪ್ರತಿಭಟನಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ನಿ ಮತ್ತು ವಿ.ಮೋಹನಾ ಅವರನ್ನೊಳಗೊಂಡ ನ್ಯಾಯಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ಇಂತಹ ಎಫ್‌ಐಆರ್‌ಗಳ ತನಿಖೆ ಮುಂದುವರಿಸಬಾರದು. ಅವುಗಳನ್ನು ಸಂಪೂರ್ಣ ಮುಕ್ತಾಯಗೊಳಿಸಲಾಗಿದೆ ಎಂದು ಪರಿಗಣಿಸಿ ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ಜುಲೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಹಾಗೂ ಮಹಾರಾಷ್ಟ್ರ, ಅಸ್ಸಾಂ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಪೀಠ ವಿಚಾರಣೆ ನಡೆಸಿತು.

ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರು ಪ್ರತಿಭಟನಾ ನಿರತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸಲು ನ್ಯಾಯಪೀಠಕ್ಕೆ ಸಂವಿಧಾನದ 142ನೇ ವಿಧಿಯಡಿ ಸುಪ್ರೀಂ ಕೋರ್ಟ್‌ಗೆ ಇರುವ ವಿಶೇಷ ಅಧಿಕಾರವನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದ್ದರು.

ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವೊಲಿಸಲು ಜುಲೈ 25ರಂದು ನೀಡಿದ್ದ ಭರವಸೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಪ್ರತಿಭಟನಾ ರ್ಯಾಲಿಗೆ ಕರೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ.