SK Home Ad
Home ಸುದ್ದಿ ದೇಶ NEET (UG) ಪ್ರಶ್ನೆ ಪತ್ರಿಕೆ ಸೋರಿಕೆ? Viral Video ನಕಲಿ: NTA ಸ್ಪಷ್ಟನೆ

NEET (UG) ಪ್ರಶ್ನೆ ಪತ್ರಿಕೆ ಸೋರಿಕೆ? Viral Video ನಕಲಿ: NTA ಸ್ಪಷ್ಟನೆ

0
78

NEET (UG) ಮರುಪರೀಕ್ಷೆ ಕುರಿತು ತಪ್ಪು ಮಾಹಿತಿ ಹರಡಿದರೆ ಕ್ರಮ: ಎನ್‌ಟಿಎ ಎಚ್ಚರಿಕೆ

ನವದೆಹಲಿ: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (NEET-UG) 2026ರ ಮರುಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊ ಸಂಪೂರ್ಣ ನಕಲಿ ಮತ್ತು ದಾರಿತಪ್ಪಿಸುವಂತದ್ದು ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಸ್ಪಷ್ಟಪಡಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿರುವ ಎನ್‌ಟಿಎ, ನೀಟ್-ಯುಜಿ 2026ರ ಮರುಪರೀಕ್ಷೆಯನ್ನು ದೇಶಾದ್ಯಂತ ಕಟ್ಟುನಿಟ್ಟಿನ ಭದ್ರತೆ ಮತ್ತು ನಿಗಾವ್ಯವಸ್ಥೆಯ ಮಧ್ಯೆ ಯಶಸ್ವಿಯಾಗಿ ನಡೆಸಲಾಗಿದೆ ಎಂದು ತಿಳಿಸಿದೆ. ಪರೀಕ್ಷೆ ನಡೆದ ಬಳಿಕ ಕೆಲವು ವ್ಯಕ್ತಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಸುಳ್ಳು ಆರೋಪಗಳೊಂದಿಗೆ ತಿರುಚಿದ ಹಾಗೂ ಕಪೋಲಕಲ್ಪಿತ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ ಎಂದು ಎನ್‌ಟಿಎ ಹೇಳಿದೆ.

“2026ರ ನೀಟ್ (ಯುಜಿ) ಪರೀಕ್ಷೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೊ ನಕಲಿ. ಅದರಲ್ಲಿ ಮಾಡಲಾಗಿರುವ ಎಲ್ಲಾ ಹೇಳಿಕೆಗಳು ಸುಳ್ಳಾಗಿದ್ದು, ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಉದ್ದೇಶದಿಂದ ಇಂತಹ ಸುಳ್ಳು ಮಾಹಿತಿಯನ್ನು ಸೃಷ್ಟಿಸಿ ಉದ್ದೇಶಪೂರ್ವಕವಾಗಿ ಪ್ರಸಾರ ಮಾಡಲಾಗುತ್ತಿದೆ. ಇದು ಗಂಭೀರ ಅಪರಾಧವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎನ್‌ಟಿಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇಂತಹ ಸುಳ್ಳು ಮತ್ತು ಗೊಂದಲ ಸೃಷ್ಟಿಸುವ ಮಾಹಿತಿಗಳಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿರುವ ಎನ್‌ಟಿಎ, ಪರೀಕ್ಷೆಗೆ ಸಂಬಂಧಿಸಿದ ಅಧಿಕೃತ ಮಾಹಿತಿಗಾಗಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಹಾಗೂ ಸಾಮಾಜಿಕ ಜಾಲತಾಣ ಖಾತೆಗಳನ್ನು ಮಾತ್ರ ಅವಲಂಬಿಸುವಂತೆ ಸೂಚಿಸಿದೆ.

ಪರೀಕ್ಷೆಯ ಪಾರದರ್ಶಕತೆ ಮತ್ತು ಭದ್ರತೆಯನ್ನು ಖಚಿತಪಡಿಸಲು ದೇಶಾದ್ಯಂತ ಪರೀಕ್ಷಾ ಸಿಬ್ಬಂದಿ, ಮೇಲ್ವಿಚಾರಕರು, ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರನ್ನು ಒಳಗೊಂಡಂತೆ ಏಳು ಲಕ್ಷಕ್ಕೂ ಅಧಿಕ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಕೇವಲ 37 ದಿನಗಳ ಅವಧಿಯಲ್ಲಿ ಮರುಪರೀಕ್ಷೆಯ ಸಂಪೂರ್ಣ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಎನ್‌ಟಿಎ ತಿಳಿಸಿದೆ.

ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಉದ್ದೇಶದಿಂದ 20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭಾನುವಾರ (ಜೂನ್ 21) ನಡೆದ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗಿದ್ದರು. ದೇಶದಾದ್ಯಂತ 5,440 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ವಿದೇಶಗಳ 14 ಕೇಂದ್ರಗಳಲ್ಲಿಯೂ ಪರೀಕ್ಷೆ ನಡೆದಿರುವುದಾಗಿ ಸಂಸ್ಥೆ ಮಾಹಿತಿ ನೀಡಿದೆ.

ಅಲ್ಲದೆ, ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳ ಸಹಯೋಗದೊಂದಿಗೆ ವೈರಲ್ ವಿಡಿಯೊ ಸೃಷ್ಟಿಸಿ ಪ್ರಸಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ.