ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅನಿರೀಕ್ಷಿತ ಆರೋಗ್ಯ ಏರುಪೇರಿನ ಹಿನ್ನೆಲೆ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಿದ್ದು, ಅದು ಯಶಸ್ವಿಯಾಗಿ ನೆರವೇರಿದೆ.
ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯ ವೇಳೆ ಪವನ್ ಕಲ್ಯಾಣ್ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆಗಳು ಹಾಗೂ ಎಂಆರ್‌ಐ ಸ್ಕ್ಯಾನಿಂಗ್ ಬಳಿಕ ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರ ತಂಡ ಸೂಚಿಸಿತು. ಅದರಂತೆ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು.
ಪವನ್ ಕಲ್ಯಾಣ್ ಅವರ ಪತ್ನಿ ಅನ್ನಾ ಕೊನಿಡೇಲಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡು, “ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳ ಪ್ರಾರ್ಥನೆಗಳಿಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ. ಅವರ ಸಹೋದರ ನಾಗಬಾಬು ಹಾಗೂ ನಟ ಸಾಯಿ ಧರಂ ತೇಜ್ ಕೂಡ ಸಾಮಾಜಿಕ ಜಾಲತಾಣದ ಮೂಲಕ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಇನ್ನೊಂದೆಡೆ, ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಮೂಲಕ ಪವನ್ ಕಲ್ಯಾಣ್ ಅವರ ಆರೋಗ್ಯ ವಿಚಾರಿಸಿದ್ದು, ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಪವನ್ ಕಲ್ಯಾಣ್ ಧೈರ್ಯಶಾಲಿ ವ್ಯಕ್ತಿ. ಅವರು ಬೇಗ ಗುಣಮುಖರಾಗಲಿ” ಎಂದು ತಿಳಿಸಿದ್ದಾರೆ.
ವೈದ್ಯರ ಸಲಹೆಯಂತೆ ಪವನ್ ಕಲ್ಯಾಣ್ ಕನಿಷ್ಠ 7ರಿಂದ 10 ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಅವರು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ. ಪೂರ್ಣ ಚೇತರಿಕೆಗೆ ಇನ್ನೂ ಕೆಲವು ದಿನಗಳು ಬೇಕಾಗಬಹುದು ಎಂದು ವೈದ್ಯಕೀಯ ತಂಡ ತಿಳಿಸಿದೆ.
ಈ ಘಟನೆಯಿಂದ ಅವರ ಅಭಿಮಾನಿಗಳು ಮತ್ತು ರಾಜಕೀಯ ವಲಯದಲ್ಲಿ ಆತಂಕ ಉಂಟಾಗಿದ್ದರೂ, ಈಗ ಅವರ ಆರೋಗ್ಯ ಸ್ಥಿರವಾಗಿರುವುದು ಎಲ್ಲರಿಗೂ ನೆಮ್ಮದಿ ತಂದಿದೆ.




















