ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜತೆ ಸಿದ್ದರಾಮಯ್ಯ ಮಹತ್ವದ ಮಾತುಕತೆ
ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರುದಿನವೇ ಸಿದ್ದರಾಮಯ್ಯ ಅವರು ಶುಕ್ರವಾರ ಬೆಳಗ್ಗೆ ದೆಹಲಿಯ 10 ಜನಪಥ್ ನಿವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಅಪ್ಪಿಕೊಂಡು ಸ್ವಾಗತಿಸಿದ ದೃಶ್ಯ ವಿಶೇಷ ಗಮನ ಸೆಳೆಯಿತು.
ಇಬ್ಬರೂ ಸ್ನೇಹಪೂರ್ವಕವಾಗಿ ಮಾತುಕತೆ ನಡೆಸಿದರೆಂದು ಮೂಲಗಳು ತಿಳಿಸಿವೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ನಂತರದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಇದನ್ನೂ ಓದಿ: ರಾಜ್ಯಪಾಲರಿಂದ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ
ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ರಾಜ್ಯದ ನೂತನ ಸರ್ಕಾರ ರಚನೆ, ಸಚಿವ ಸಂಪುಟದ ಸಮತೋಲನ ಹಾಗೂ ಪಕ್ಷದಲ್ಲಿ ತಮ್ಮ ಮುಂದಿನ ಪಾತ್ರದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಸಭಾ ಸ್ಥಾನವನ್ನು ಈಗಾಗಲೇ ನಿರಾಕರಿಸಿರುವ ಸಿದ್ದರಾಮಯ್ಯ ಅವರು ರಾಷ್ಟ್ರೀಯ ರಾಜಕಾರಣಕ್ಕಿಂತ ಕರ್ನಾಟಕ ರಾಜಕೀಯದಲ್ಲೇ ಮುಂದುವರಿಯಲು ಬಯಸುತ್ತಿರುವುದಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ತಿಳಿಸಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯ ರಾಜಕೀಯದಲ್ಲೇ ಸಕ್ರಿಯವಾಗಿರಲು ಅವರು ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಇದನ್ನೂ ಓದಿ: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ನಿಧನ
ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕಿ ಸೋನಿಯಾ ಗಾಂಧಿ ಉಪಸ್ಥಿತರಿರಲಿಲ್ಲ ಎನ್ನಲಾಗಿದ್ದು, ಈ ಕಾರಣದಿಂದ ಸಿದ್ದರಾಮಯ್ಯ ಅವರು ಮುಖ್ಯವಾಗಿ ರಾಹುಲ್ ಗಾಂಧಿ ಅವರೊಂದಿಗೇ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ. ರಾಜ್ಯಕ್ಕೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ ಎನ್ನಲಾಗಿದೆ.
ಇನ್ನೊಂದೆಡೆ, ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ತಮ್ಮ ಪುತ್ರ ಹಾಗೂ ಕೆಲವು ಆಪ್ತರಿಗೆ ಸ್ಥಾನ ಕಲ್ಪಿಸುವ ಕುರಿತೂ ಸಿದ್ದರಾಮಯ್ಯ ಚರ್ಚೆ ನಡೆಸಿರುವ ಸಾಧ್ಯತೆ ಇದೆ ಎಂಬ ರಾಜಕೀಯ ವಲಯದಲ್ಲಿ ಚರ್ಚೆಗಳು ಕೇಳಿಬರುತ್ತಿವೆ. ಉಪಮುಖ್ಯಮಂತ್ರಿ ಹುದ್ದೆ ಸೇರಿದಂತೆ ಪ್ರಮುಖ ಸ್ಥಾನಗಳ ಬಗ್ಗೆ ಮಾತುಕತೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: ಕರ್ನಾಟಕ ಪ್ರವಾಸ ಆರಂಭಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್
ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಉಪಸ್ಥಿತರಿದ್ದರು. ಸಭೆಯ ಬಳಿಕ ಮಾತನಾಡಿದ ಅವರು, “ಇದು ತುಂಬಾ ಆಹ್ಲಾದಕರ ಸಭೆಯಾಗಿತ್ತು. ಹಲವು ವಿಷಯಗಳ ಬಗ್ಗೆ ಚರ್ಚೆ ನಡೆದಿದೆ” ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸುಗಮವಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರ್ಜೇವಾಲಾ, “ಖಂಡಿತವಾಗಿಯೂ ಯಾವುದೇ ಅಡಚಣೆ ಇಲ್ಲದೆ ಅಧಿಕಾರ ವರ್ಗಾವಣೆ ನಡೆಯಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: IPLನಲ್ಲಿ ಆಟಗಾರರಿಗೆ ಹೊಸ ನಿಯಮ ಜಾರಿ : ಭ್ರಷ್ಟಾಚಾರ ತಡೆಗೆ ಕಠಿಣ ಕ್ರಮ
ಈ ನಡುವೆ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಔಪಚಾರಿಕವಾಗಿ ಅಂಗೀಕರಿಸಿದ್ದಾರೆ. ಇದೀಗ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಹೆಚ್ಚಾಗಿದೆ. ಪ್ರಮಾಣವಚನ ಸಮಾರಂಭದ ಮುಹೂರ್ತವನ್ನು ಶೀಘ್ರದಲ್ಲೇ ನಿಗದಿಪಡಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಸಂಘಟನಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರೊಂದಿಗೆ ಕೂಡ ಪ್ರತ್ಯೇಕ ಮಾತುಕತೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ಪಕ್ಷ ಸಂಘಟನೆಯ ಕುರಿತು ಮಹತ್ವದ ಚರ್ಚೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ನೂತನ ಮುಖ್ಯಮಂತ್ರಿಯ ಆಯ್ಕೆ ಪ್ರಕ್ರಿಯೆಯನ್ನು ಅಧಿಕೃತಗೊಳಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ ಸಂಜೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಕಾಂಗ್ರೆಸ್ ಶಾಸಕರಿಗೆ ಬೆಂಗಳೂರಿಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.



















