ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು ಸೆ. 22 ರಿಂದ ಸಮೀಕ್ಷೆ ನಡೆಯಲಿದೆ. ಕಾಂತರಾಜು ಆಯೋಗದ ವರದಿಯಲ್ಲಿ ಅವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ ಎಂಬ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಮರು ಜಾತಿಗಣತಿಗೆ ನಿರ್ಧರಿಸಿತ್ತು. ಇದೀಗ ಮರು ಸಮೀಕ್ಷೆಗೆ ಮುಂದಾಗಿದೆ.
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಹದಿನೈದು ದಿನಗಳ ಕಾಲ ಜಾತಿಗಣತಿ ಸಮೀಕ್ಷೆ ನಡೆಯಲಿದ್ದು ಅಕ್ಟೋಬರ್ ಅಂತ್ಯದ ವೇಳೆಗೆ ಸಮೀಕ್ಷಾ ವರದಿ ಸರ್ಕಾರದ ಕೈಸೇರಲಿದೆ. ಬುಧವಾರ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದ್ದಾರೆ.
ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಬೇಕೆಂದೂ ಸೂಚನೆ ನೀಡಿರುವ ಸಿದ್ದರಾಮಯ್ಯ, ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದು ಹೇಳಿದ್ದಾರೆ. ಆದರೆ ಕೇವಲ ಹದಿನೈದೇ ದಿನಗಳಲ್ಲಿ ಗಣತಿಯನ್ನು ಮಾಡಲು ಸಾಧ್ಯವೇ ಎನ್ನುವ ಪ್ರಶ್ನೆ ಎದ್ದಿದೆ.
ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ಧಪಡಿಸಿ ಮ್ಯಾನುಯಲ್ ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದಿರುವ ಸಿದ್ದರಾಮಯ್ಯ, ಈ ಬಾರಿ ಮೊಬೈಲ್ ಆ್ಯಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು ಎಂದರು.
ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚಿಸಲಾಗಿದೆ. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನಿಸಲಾಗಿದೆ ಎಂದಿರುವ ಅವರು, ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು.
ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65 ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಯನ್ನು ಸಹ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.