ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರಿಸುತ್ತಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಎಂಡಿಸಿ) ಭಾನುವಾರ ಬಿಡುಗಡೆ ಮಾಡಿರುವ ಹವಾಮಾನ ವರದಿಯಂತೆ ರಾಜ್ಯದಲ್ಲಿ ಜುಲೈ 30 ನಂತರ ಮಳೆ ಚಟುವಟಿಕೆ ಕಡಿಮೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಕಳೆದ ಮೂರು ದಿನಗಳಿಂದ ಒಂದೇ ಮಾದರಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ ತುಂತುರು ಮಳೆಯಾಗುತ್ತಿದೆ. ತಂಪಾದ ಗಾಳಿ ಬೀಸುತ್ತಿದ್ದು, ಬೈಕ್ ಸವಾರರು ಗಾಳಿಯನ್ನು ಶಪಿಸುತ್ತಿದ್ದಾರೆ.
ಮುಂದಿನ 7 ದಿನದ ಮುನ್ಸೂಚನೆ: ಕೆಎಸ್‌ಎನ್‌ಎಂಡಿಸಿ ಮುನ್ಸೂಚನೆ ಪ್ರಕಾರ ಭಾನುವಾರ ರಾಜ್ಯದ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಭಾರೀ ಮಳೆ ಹಾಗೂ ಅಲ್ಲಲ್ಲಿ ಅತಿಯಾದ ಭಾರೀ ಮಳೆಯಾಗಲಿದೆ.
ಒಳನಾಡು ಜಿಲ್ಲೆಗಳಲ್ಲಿ ಚದುರಿದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜುಲೈ 30ನಂತರ ಮಳೆ ಚಟುವಟಿಕೆ ಕಡಿಮೆಯಾಗುವ ಸಾಧ್ಯತೆ ಇದೆ.
ಮುಂದಿನ 7 ದಿನಗಳ ಕಾಲದ ಮುನ್ಸೂಚನೆ ಪ್ರಕಾರ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರೀ ಇಂದ ಅತಿ ಭಾರೀ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗಲಿದೆ.
ಕರಾವಳಿ, ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಗಾಳಿಯ ಅಬ್ಬರಕ್ಕೆ ಮರಗಳು ಧರೆಗುರುಳಿದ್ದು, ಹಲವು ಗ್ರಾಮಗಳಲ್ಲಿ ಎರಡು ಮೂರು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರದಲ್ಲಿ ಮಳೆ ಅಬ್ಬರಿಸುತ್ತಿದ್ದು, ಶೃಂಗೇರಿಯಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಶೃಂಗೇರಿ ಪಟ್ಟಣದ ಗಾಂಧಿ ಮೈದಾನಕ್ಕೆ ನದಿಯ ನೀರು ನುಗ್ಗಿದೆ.
ಶಿವಮೊಗ್ಗ ಸಮೀಪದ ಗಾಜನೂರಿನಲ್ಲಿರುವ ತುಂಗಾ ಜಲಾಶಯದಿಂದ 50,000 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಭದ್ರಾ ಡ್ಯಾಂನಿಂದ ಸಹ ನದಿಗೆ ನೀರು ಹರಿಸಲಾಗಿದ್ದು, ತುಂಗಭದ್ರಾ ಡ್ಯಾಂಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.
ಮಲೆನಾಡು ಭಾಗದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗು ಜಿಲ್ಲೆಯಲ್ಲಿಯೂ ಮಳೆ ಅಬ್ಬರಿಸುತ್ತಿದ್ದು, ತ್ರಿವೇಣಿ ಸಂಗಮ ಸಂಪೂರ್ಣವಾಗಿ ಜಲಾವೃತವಾಗಿದೆ. ಜಿಲ್ಲೆಯಲ್ಲಿ ಗಾಳಿಯ ಅಬ್ಬರಕ್ಕೆ ಹಲವು ಮರಳು ಉರುಳಿ ಬಿದ್ದಿವೆ.
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಪ್ರವಾಸ ಕೈಗೊಳ್ಳುವ ಜನರು ಸ್ಥಳೀಯರ ಮಾಹಿತಿ ಆಧರಿಸಿ ಸಂಚಾರವನ್ನು ನಡೆಸಿ ಎಂದು ಮನವಿ ಮಾಡಲಾಗಿದೆ. ಚಿಕ್ಕಮಗಳೂರಿನಲ್ಲಿ ಚಂದ್ರದ್ರೋಣ ಪರ್ವತ ರಸ್ತೆಯ 3 ಕಡೆಗಳಲ್ಲಿ ದೊಡ್ಡ ಮರಗಳು ಬಿದ್ದಿವೆ. ಇದರಿಂದಾಗಿ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ರಸ್ತೆ ಸಂಪೂರ್ಣ ಬಂದ್ ಆಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಅಬ್ಬರಿಸುತ್ತಿದೆ. ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲ್ಪ ಪ್ರಮಾಣದಲ್ಲಿ ಭೂ ಕುಸಿತವಾಗಿದ್ದು, ವಾಹನಗಳು ಸಂಚಾರವನ್ನು ನಡೆಸುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.