SK Home Ad
Home ಸುದ್ದಿ ರಾಜ್ಯ ಕರ್ನಾಟಕದ ಜನರಿಗೆ ಮತ್ತೊಂದು ಶಾಕ್‌: ಶೀಘ್ರದಲ್ಲೇ ಬಸ್ ಟಿಕೆಟ್ ದರ ಹೆಚ್ಚಳ!

ಕರ್ನಾಟಕದ ಜನರಿಗೆ ಮತ್ತೊಂದು ಶಾಕ್‌: ಶೀಘ್ರದಲ್ಲೇ ಬಸ್ ಟಿಕೆಟ್ ದರ ಹೆಚ್ಚಳ!

0
2

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ದರ ಏರಿಕೆಯ ಶಾಕ್ ನೀಡಲು ಸಿದ್ಧವಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಈ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್‌ ಮಹತ್ವದ ಮಾಹಿತಿ ನೀಡಿದ್ದಾರೆ.

ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಬಸ್ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಕಳೆದ ಎಂಟು ತಿಂಗಳಲ್ಲಿ ಕೇಂದ್ರ ಸರ್ಕಾರ ಹಲವು ಬಾರಿ ತೈಲೋತ್ಪನ್ನಗಳ ದರ ಹೆಚ್ಚಳ ಮಾಡಿದ್ದು, ಇದರ ಪರಿಣಾಮ ರಾಜ್ಯದ ಸಾರಿಗೆ ನಿಗಮಗಳು ಭಾರಿ ನಷ್ಟ ಅನುಭವಿಸುತ್ತಿವೆ ಎಂದು ಅವರು ಹೇಳಿದ್ದಾರೆ.

ಸಾವಿರಾರು ಕೋಟಿ ನಷ್ಟ: ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡದೆ ಇರುವುದರಿಂದ ನಾಲ್ಕೂ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಬೈರತಿ ಸುರೇಶ್ ತಿಳಿಸಿದ್ದಾರೆ.

ತೈಲ ಬೆಲೆ ಏರಿಕೆ ಸೇರಿದಂತೆ ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂಬ ಸಂದೇಶವನ್ನು ಸಚಿವರು ನೀಡಿದ್ದಾರೆ.

ದರ ಏರಿಕೆ ಎಷ್ಟು?: ಬಸ್ ಟಿಕೆಟ್ ದರವನ್ನು ಎಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕು ಎಂಬುದರ ಕುರಿತು ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ಅಧ್ಯಯನ ನಡೆಸುತ್ತಿದೆ. ಸಮಿತಿ ಶೀಘ್ರದಲ್ಲೇ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ.

ಸಮಿತಿಯ ವರದಿ ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡುವ ಚಿಂತನೆ ಸರ್ಕಾರದಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರದಿಂದ ಸಾರಿಗೆ ನಿಗಮಗಳಿಗೆ ನೆರವು: ದರ ಏರಿಕೆಯಿಂದ ಪ್ರಯಾಣಿಕರ ಮೇಲೆ ಬೀಳುವ ಹೆಚ್ಚುವರಿ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದಲೂ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ಬೈರತಿ ಸುರೇಶ್ ಹೇಳಿದ್ದಾರೆ.

ಹೀಗಾಗಿ, ರಾಜ್ಯದ ಸರ್ಕಾರಿ ಬಸ್ ಪ್ರಯಾಣಿಕರಿಗೆ ಸದ್ಯದಲ್ಲೇ ಹೊಸ ಬಸ್ ದರ ಅನ್ವಯವಾಗುವ ಸಾಧ್ಯತೆ ಇದ್ದು, ಎಷ್ಟು ರೂಪಾಯಿ ಹೆಚ್ಚಳವಾಗಲಿದೆ ಎಂಬುದು ಸಮಿತಿ ವರದಿ ಬಳಿಕ ಸ್ಪಷ್ಟವಾಗಲಿದೆ.