SK Home Ad
Home ಸುದ್ದಿ ರಾಜ್ಯ ನ. 13ಕ್ಕೆ ಬೆಂಗಳೂರು–ಮಂಗಳೂರು–ಮಡಗಾಂವ್ ವಂದೇ ಭಾರತ್ ರೈಲು ಸಂಚಾರ ಆರಂಭ

ನ. 13ಕ್ಕೆ ಬೆಂಗಳೂರು–ಮಂಗಳೂರು–ಮಡಗಾಂವ್ ವಂದೇ ಭಾರತ್ ರೈಲು ಸಂಚಾರ ಆರಂಭ

0
19

ಬೆಂಗಳೂರು: ಕರ್ನಾಟಕದ ರೈಲ್ವೆ ಸಂಪರ್ಕ ವ್ಯವಸ್ಥೆಗೆ ಮತ್ತಷ್ಟು ಬಲ ನೀಡುವ ನಿಟ್ಟಿನಲ್ಲಿ ಬೆಂಗಳೂರು–ಮಂಗಳೂರು–ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ನವೆಂಬರ್ 13ರಂದು ಆರಂಭವಾಗಲಿದೆ. ಅಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಐಐಎಂ ಸಭಾಂಗಣದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಹಸಿರು ನಿಶಾನೆ ತೋರಿಸುವುದರ ಜತೆಗೆ ರಾಜ್ಯದ ವಿವಿಧ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ನಾಲ್ಕು ನಿಲ್ದಾಣಗಳ ಅಭಿವೃದ್ಧಿ: ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಚಿಕ್ಕಮಗಳೂರು ಮತ್ತು ಚಾಮರಾಜನಗರ ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಾಗುವುದು. ಇದರೊಂದಿಗೆ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿಯನ್ನೂ ರಾಷ್ಟ್ರಕ್ಕೆ ಸಮರ್ಪಿಸಲಾಗುತ್ತದೆ.

ವಿವಿಧ ನಿಲ್ದಾಣಗಳಲ್ಲಿ ವಿಶೇಷ ಕಾರ್ಯಕ್ರಮ: ನವೆಂಬರ್ 13ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯದ ಹಲವು ರೈಲು ನಿಲ್ದಾಣಗಳಲ್ಲಿ ಏಕಕಾಲದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಮಂಗಳೂರು ಜಂಕ್ಷನ್‌ನಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳಲ್ಲಿ ಪುನರಾಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನಡೆಯಲಿದ್ದು, ವಂದೇ ಭಾರತ್ ರೈಲಿಗೆ ಮಾರ್ಗಮಧ್ಯೆಯೂ ಹಸಿರು ನಿಶಾನೆ ತೋರಿಸಲಾಗುತ್ತದೆ. ಚಾಮರಾಜನಗರ ಮತ್ತು ಚಿಕ್ಕಮಗಳೂರು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳು ಲೋಕಾರ್ಪಣೆಯಾಗಲಿವೆ. ಕಬಕ ಪುತ್ತೂರು ಮತ್ತು ಹಾಸನ ರೈಲು ನಿಲ್ದಾಣಗಳಲ್ಲಿ ವಂದೇ ಭಾರತ್ ರೈಲಿಗೆ ಮಾರ್ಗಮಧ್ಯೆ ಹಸಿರು ನಿಶಾನೆ ತೋರಿಸಲಾಗುವುದು.

ಪ್ರಯಾಣಿಕರಿಗೆ ಆಧುನಿಕ ಸೌಲಭ್ಯ: ಬೆಂಗಳೂರು–ಮಂಗಳೂರು–ಮಡಗಾಂವ್ ವಂದೇ ಭಾರತ್ ರೈಲು ಸೇವೆಯಿಂದ ಪ್ರಯಾಣಿಕರಿಗೆ ವೇಗವಾದ ಮತ್ತು ಆರಾಮದಾಯಕ ಪ್ರಯಾಣದ ಅನುಭವ ದೊರೆಯಲಿದೆ. ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಹಾಗೂ ರೈಲು ಮಾರ್ಗದ ವಿದ್ಯುದೀಕರಣದಿಂದ ಪ್ರಯಾಣಿಕರ ಸೌಲಭ್ಯಗಳು ಮತ್ತು ರೈಲು ಕಾರ್ಯಾಚರಣೆಯ ದಕ್ಷತೆ ಹೆಚ್ಚಲಿದೆ. ಕರ್ನಾಟಕದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಈ ಯೋಜನೆಗಳು ಮಹತ್ವದ ಮೈಲಿಗಲ್ಲಾಗಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.