ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದೆ. ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಅಧ್ಯಯನ ಸಮಿತಿ ನೀಡಿರುವ ವರದಿಯ ಆಧಾರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬಸ್ ಪ್ರಯಾಣ ದರವನ್ನು ಶೇ. 25ರಷ್ಟು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣ ದರವನ್ನು ಶೇ. 40ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನವೆಂಬರ್ 3ರಂದು ಸಾರಿಗೆ ನಿಗಮಗಳ ಸಭೆ: ಬಸ್ ಪ್ರಯಾಣ ದರ ಏರಿಕೆ ಕುರಿತು ನವೆಂಬರ್ 3ರಂದು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಉದ್ದೇಶಿಸಲಾಗಿದೆ. ಈ ಸಭೆಯಲ್ಲಿ ದರ ಏರಿಕೆಯ ಪ್ರಸ್ತಾವನೆ ಕುರಿತು ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಪ್ರಕಟವಾಗುವ ನಿರೀಕ್ಷೆಯಿದೆ.
ಸದ್ಯ ದರ ಏರಿಕೆ ಪ್ರಸ್ತಾವನೆಗೆ ಅಂತಿಮ ಅನುಮೋದನೆ ದೊರೆತಿಲ್ಲ. ಮುಂದಿನ ಸಂಪುಟ ಸಭೆಯ ಚರ್ಚೆ ಹಾಗೂ ಸಾರಿಗೆ ನಿಗಮಗಳೊಂದಿಗಿನ ಸಭೆಯ ಬಳಿಕವಷ್ಟೇ ದರ ಏರಿಕೆಯ ಪ್ರಮಾಣ ಮತ್ತು ಜಾರಿಗೆ ಬರುವ ದಿನಾಂಕದ ಬಗ್ಗೆ ಸ್ಪಷ್ಟತೆ ಸಿಗಲಿದೆ. ಒಂದು ವೇಳೆ ಪ್ರಸ್ತಾವನೆಗೆ ಅನುಮೋದನೆ ದೊರೆತರೆ, ಬಸ್ ಪ್ರಯಾಣಿಕರು ಹೆಚ್ಚುವರಿ ಹಣ ಪಾವತಿಸಬೇಕಾಗಬಹುದು.



















