ಬೆಂಗಳೂರು: ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಸರ್ಕಾರದ ಅನುದಾನದೊಂದಿಗೆ ಆರಂಭಿಸುವ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು, ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಆರಂಭಿಸಲು ಅನುಮೋದನೆ ನೀಡಲಾಗಿದೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ “ಆಶಾಕಿರಣ” ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 52.85 ಕೋಟಿ ರೂ. ಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ ಎಂದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಮೊದಲನೇ ಹಂತದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ 65.00 ಕೋಟಿ ರೂ.ಗಳ ವೆಚ್ಚದಲ್ಲಿ ಜಮೀನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಅಡಿಯಲ್ಲಿರುವ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನುಸರಣೀಯ ಆಸ್ಪತ್ರೆ ನಿರ್ವಹಣಾ ವ್ಯವಸ್ಥೆ (ABDM – HMS) ತಂತ್ರಾಂಶದ ಹಂತವಾರು ಅನುಷ್ಠಾನಕ್ಕಾಗಿ ತಾತ್ವಿಕ ಅನುಮೋದನೆ ಹಾಗೂ ವಿವಿಧ ಸೇವಾ ಪೂರೈಕೆದಾರರೊಂದಿಗೆ ಪ್ರತಿ ವಹಿವಾಟಿನ ಪಾವತಿ ಆಧಾರದ ಮೇಲೆ ಮೊದಲನೇ ಹಂತದ ಅನುಷ್ಠಾನಕ್ಕೆ (ವಾರ್ಷಿಕ ಅಂದಾಜು ವೆಚ್ಚ 20.60 ಕೋಟಿ ರೂ.ಗಳು) ಆಡಳಿತಾತ್ಮಕ ಅನುಮೋದನೆ ನೀಡಲು ನಿರ್ಣಯಿಸಲಾಗಿದೆ ಎಂದು ಹೇಳಿದರು.
ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ತೀವ್ರ ನಿಗಾ ಘಟಕ ನಿರ್ಮಾಣ ಕಾಮಗಾರಿಯನ್ನು 24.22 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದವರು ಹೇಳಿದರು.
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ 6334.01 ಲಕ್ಷ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಹಾಗೂ ಹೆಚ್ಚುವರಿ ಮೊತ್ತ 896.21 ಲಕ್ಷ ರೂ.ಗಳನ್ನು ಆಯವ್ಯಯದಲ್ಲಿ ಹಂಚಿಕೆ ಮಾಡಲಾದ ಮೊತ್ತದಲ್ಲಿ ಭರಿಸಲು ಸಚಿವ ಸಂಪುಟ ನಿರ್ಣಯಿಸಿದೆ ಎಂದರು.