ಜಾತಿ ಗಣತಿ ತಾಂತ್ರಿಕ ಸಮಸ್ಯೆ ಪರಿಹಾರಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಡಿಯೋ ಸಂವಾದ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ಸಂದರ್ಭದಲ್ಲಿ ಎದುರಾಗುತ್ತಿರುವ ತಾಂತ್ರಿಕ ಅಡಚಣೆಗಳನ್ನು ನಿವಾರಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಈ ಕುರಿತು ಮಾಹಿತಿ ನೀಡಿದರು.
ಸಮಸ್ಯೆಗಳ ಚರ್ಚೆ: ಜಾತಿ ಗಣತಿ ಪ್ರಕ್ರಿಯೆಯ ವೇಳೆ ಹಲವು ಕಡೆಗಳಲ್ಲಿ ಸರ್ವರ್ ದೋಷ ಸೇರಿದಂತೆ ತಾಂತ್ರಿಕ ಸಮಸ್ಯೆಗಳು ವರದಿಯಾಗಿದ್ದು, ಇದರ ಪರಿಣಾಮವಾಗಿ ಸಮೀಕ್ಷಾ ಕಾರ್ಯಕ್ಕೆ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಚರ್ಚೆ ನಡೆದು, ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳುವಂತೆ ನಿರ್ಧರಿಸಲಾಗಿದೆ.
“ಮುಖ್ಯಮಂತ್ರಿ ಅವರು ನಾಳಿನ ವಿಡಿಯೋ ಸಂವಾದದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಿದ್ದಾರೆ” ಎಂದು ಸಚಿವ ಎಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದ ಅವರು ಜಾತಿ ಗಣತಿ ಅವಧಿಯನ್ನು ವಿಸ್ತರಿಸುವ ಕುರಿತು ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದರು.