SK Home Ad
Home ಸುದ್ದಿ ರಾಜ್ಯ ಸಿಎಂ ವಿಜಯ್ ಕೊಲ್ಲೂರು ಭೇಟಿ: ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ನಿರ್ಬಂಧ, ‘ಝಡ್ ಪ್ಲಸ್’ ಭದ್ರತೆ

ಸಿಎಂ ವಿಜಯ್ ಕೊಲ್ಲೂರು ಭೇಟಿ: ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ನಿರ್ಬಂಧ, ‘ಝಡ್ ಪ್ಲಸ್’ ಭದ್ರತೆ

0
30

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಜೂನ್ 12ರ ಶುಕ್ರವಾರದಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ದೇವಳದ ಸುತ್ತಮುತ್ತ ಹಾಗೂ ಸಂಚಾರ ಮಾರ್ಗದುದ್ದಕ್ಕೂ ಕರ್ನಾಟಕ ಮತ್ತು ತಮಿಳುನಾಡು ಪೊಲೀಸರು ಅತ್ಯಂತ ಬಿಗಿ ಭದ್ರತೆ ಏರ್ಪಡಿಸಿದ್ದಾರೆ.

ಮುಖ್ಯಮಂತ್ರಿ ವಿಜಯ್ ಮಧ್ಯಾಹ್ನ 12:30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣಿಸಲಿದ್ದು, ಭದ್ರತೆಯ ದೃಷ್ಟಿಯಿಂದ ದಾರಿಯುದ್ದಕ್ಕೂ ವ್ಯಾಪಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಎಂ ವಿಜಯ್ ‘ಝಡ್ ಪ್ಲಸ್’ (Z+) ಭದ್ರತೆ ಹೊಂದಿರುವುದರಿಂದ, ಉಭಯ ರಾಜ್ಯಗಳ ಡಿಐಜಿ ಮತ್ತು ಎಸ್‌ಪಿ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ ಎಂದು ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ದರ್ಶನ ಸಮಯ ಪ್ರಕಟಣೆ ಮತ್ತು ಸಾರ್ವಜನಿಕರಿಗೆ ನಿರ್ಬಂಧ: ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಾರ್ವಜನಿಕರ ದರ್ಶನ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸಿಎಂ ವಿಜಯ್ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರಾದರೂ, ಯಾವುದೇ ಸಾರ್ವಜನಿಕ ಸಭೆ ಅಥವಾ ಸಮಾರಂಭಗಳಲ್ಲಿ ಭಾಗವಹಿಸುತ್ತಿಲ್ಲ. ದರ್ಶನದ ಬಳಿಕ ರಸ್ತೆ ಮಾರ್ಗವಾಗಿ ಮತ್ತೆ ಮಂಗಳೂರಿಗೆ ತೆರಳಿ, ಅಲ್ಲಿಂದ ವಿಶೇಷ ವಿಮಾನದ ಮೂಲಕ ತಮಿಳುನಾಡಿಗೆ ವಾಪಸಾಗಲಿದ್ದಾರೆ.

ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ: ಇದೇ ವೇಳೆ ತಮಿಳುನಾಡು ಸಿಎಂ ಭೇಟಿಗೆ ಕರ್ನಾಟಕದಲ್ಲಿ ವಿರೋಧವೂ ವ್ಯಕ್ತವಾಗಿದೆ. ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ನಿರಂತರವಾಗಿ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ, ಕೊಲ್ಲೂರಿಗೆ ಆಗಮಿಸಲಿರುವ ಸಿಎಂ ವಿಜಯ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಹದ್ದಿನ ಕಣ್ಣಿಟ್ಟಿದ್ದಾರೆ.