ಬೆಳಗಾವಿ: ಜಿಲ್ಲೆಯ ಮತದಾರರ ಪಟ್ಟಿಯಿಂದ ಸುಮಾರು 15 ಸಾವಿರ ಜನರ ಹೆಸರುಗಳನ್ನು ಒಂದೇ ಬಾರಿಗೆ ತೆಗೆದುಹಾಕುವ ಸಂಚು ನಡೆದಿತ್ತು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ಪ್ರಕರಣದ ತಪ್ಪಿತಸ್ಥರ ವಿರುದ್ಧ ತನಿಖೆಗೆ ಒತ್ತಾಯಿಸಿದ್ದಾರೆ.
ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ರಾಹುಲ್, ‘ಸೆಪ್ಟೆಂಬರ್ 22, 23 ಮತ್ತು 24ರ ಕೇವಲ ಮೂರು ದಿನಗಳಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಫಾರಂ–7 ಅರ್ಜಿಗಳ ಮಹಾಪೂರವೇ ಹರಿದುಬಂದಿದೆ. ಮುಸ್ಲಿಮರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮತದಾರರನ್ನು ಗುರಿಯಾಗಿಸಲಾಗಿದೆ’ ಎಂದು ದೂರಿದ್ದಾರೆ.
ಈ ಸಮುದಾಯಗಳ ಬಹುತೇಕ ಜನರು ಬಿಜೆಪಿಗೆ ವಿರುದ್ಧವಾಗಿ ಮತ ಚಲಾಯಿಸುತ್ತಾರೆ ಎಂಬ ಕಾರಣಕ್ಕೆ ಅವರ ಹೆಸರುಗಳನ್ನು ತೆಗೆದುಹಾಕುವ ಪ್ರಯತ್ನ ನಡೆದಿದೆ ಎಂದು ಅವರು ಆಪಾದಿಸಿದ್ದಾರೆ.
‘ದೇಶದಾದ್ಯಂತ ಮತ ಕಳ್ಳತನದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದರೂ ಬಿಜೆಪಿ ಮತ್ತು ಚುನಾವಣಾ ಆಯೋಗ ಅದೇ ಕೃತ್ಯವನ್ನು ಬಹಿರಂಗವಾಗಿ ಮುಂದುವರಿಸುತ್ತಿವೆ’ ಎಂದು ರಾಹುಲ್ ಕಿಡಿಕಾರಿದ್ದಾರೆ.
ತಂತ್ರಾಂಶದ ನೆರವಿನಿಂದ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸುವ ವಿಧಾನವನ್ನು ತಾವು ಈ ಹಿಂದೆಯೇ ಬಹಿರಂಗಪಡಿಸಿದ್ದಾಗಿ ಅವರು ಹೇಳಿದ್ದಾರೆ. ಬಿಜೆಪಿ ಮತ್ತು ಚುನಾವಣಾ ಆಯೋಗಕ್ಕೆ ಸೇರಿದವರು ಶಾಮೀಲಾಗಿ, ಆಯ್ದ ಮತದಾರರ ವಿರುದ್ಧ ಸ್ವಯಂಚಾಲಿತವಾಗಿ ದೊಡ್ಡ ಪ್ರಮಾಣದಲ್ಲಿ ಫಾರಂ–7 ಅರ್ಜಿಗಳನ್ನು ಸಲ್ಲಿಸುತ್ತಾರೆ. ಈ ಪ್ರಕ್ರಿಯೆಯನ್ನು ಮೇಲ್ಮಟ್ಟದಿಂದ ನಿಯಂತ್ರಿಸಲಾಗುತ್ತಿದೆ ಎಂಬುದು ಅವರ ಆರೋಪ.
ಕರ್ನಾಟಕದ ಕಾಂಗ್ರೆಸ್ ನಾಯಕರು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿರುವ ರಾಹುಲ್, ‘ಎಫ್‌ಐಆರ್ ದಾಖಲಿಸಲು ಮುಖ್ಯ ಚುನಾವಣಾಧಿಕಾರಿ ನಿರಾಕರಿಸುತ್ತಿರುವುದೇಕೆ?’ ಎಂದು ಪ್ರಶ್ನಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಇದನ್ನು ‘ದೇಶದ್ರೋಹ’ ಎಂದು ಕರೆದಿದ್ದಾರೆ.





















