ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಸೃಷ್ಟಿಯಾಗಿದೆ. ಹಿರಿಯ ನಾಯಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಸರ್ಕಾರಿ ನಿವಾಸ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ 7 ಗಂಟೆಗೆ ಶುರುವಾದ ಈ ರೇಡ್, ರಾಜ್ಯ ಕಾಂಗ್ರೆಸ್ ವಲಯದಲ್ಲಿ ಭಾರೀ ತಲ್ಲಣ ಮೂಡಿಸಿದೆ.
ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರ ವಿರುದ್ಧ ವಿದೇಶಿ ವ್ಯವಹಾರಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣವೊಂದು ದಾಖಲಾಗಿದೆ. ಇದೇ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಸತತ ಮೂರು ಗಂಟೆಗಳ ಕಾಲ ಸಚಿವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ದಕ್ಷಿಣ ಆಫ್ರಿಕಾ ಹಾಗೂ ಗೋವಾದಲ್ಲಿರುವ ಕೆಲವು ಕಂಪನಿಗಳಲ್ಲಿ ಮಾಡಲಾದ ಕೋಟ್ಯಂತರ ರೂಪಾಯಿ ಹೂಡಿಕೆಯ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
ಈ ವಿಚಾರಣೆಯ ವೇಳೆ ಸಚಿವರು ಸ್ಪಷ್ಟನೆ ನೀಡಿದ್ದು, ದಕ್ಷಿಣ ಆಫ್ರಿಕಾದ ಗಣಿಗಾರಿಕೆ ಮತ್ತು ಅದಿರು ಸಾಗಾಟ ಕಂಪನಿಯಲ್ಲಿ ಹೂಡಿಕೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ, ತಮ್ಮ ಮಕ್ಕಳು ಹಾಗೂ ದಕ್ಷಿಣ ಆಫ್ರಿಕಾದ ವ್ಯಕ್ತಿಯೊಬ್ಬರು ಆ ಕಂಪನಿಯ ನಿರ್ದೇಶಕರಾಗಿದ್ದಾರೆ ಎಂಬ ಮಾಹಿತಿಯನ್ನು ಅಧಿಕಾರಿಗಳ ಮುಂದಿಟ್ಟಿದ್ದಾರೆ. ಆದರೆ, ಬೃಹತ್ ಮೊತ್ತದ ಹಣ ವರ್ಗಾವಣೆ ಬಗ್ಗೆ ಇಡಿ ಅಧಿಕಾರಿಗಳು ದಾಖಲೆ ಕೇಳಿದಾಗ, “ಸಂಬಂಧಪಟ್ಟ ಪೂರಕ ದಾಖಲೆಗಳು ಬೆಳಗಾವಿ ಹಾಗೂ ಡಾಲರ್ಸ್ ಕಾಲೋನಿ ಮನೆಯಲ್ಲಿವೆ. ಸದ್ಯ ನಾನು ಸರ್ಕಾರಿ ನಿವಾಸದಲ್ಲಿ ಇರುವುದರಿಂದ, ಹಣಕಾಸು ವ್ಯವಹಾರದ ನಿಖರ ದಾಖಲೆಗಳನ್ನು ಒದಗಿಸಲು ಸ್ವಲ್ಪ ಕಾಲಾವಕಾಶ ಬೇಕು” ಎಂದು ಸಚಿವರು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಇತ್ತ ಜಾರಕಿಹೊಳಿ ಅವರ ನಿವಾಸದಲ್ಲಿ ಇಡಿ ಡ್ರಿಲ್ ನಡೆಯುತ್ತಿದ್ದಂತೆಯೇ, ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ್ದಾರೆ. ಈ ಇಬ್ಬರು ನಾಯಕರ ನಡುವೆ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಹಾಗೂ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಗಂಭೀರ ಚರ್ಚೆ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಒಟ್ಟಿನಲ್ಲಿ, ಈ ಇಡಿ ದಾಳಿಯು ರಾಜ್ಯ ಸರ್ಕಾರದ ಮಟ್ಟದಲ್ಲಿ ಹೊಸದೊಂದು ಬಿರುಗಾಳಿ ಎಬ್ಬಿಸುವ ಮುನ್ಸೂಚನೆ ನೀಡಿದೆ.






















