SK Home Ad
Home ಸುದ್ದಿ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಶಾಸಕ ಸೈಯದ್ ಯಾಸೀನ್ ನಿಧನ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಶಾಸಕ ಸೈಯದ್ ಯಾಸೀನ್ ನಿಧನ

0
105

ರಾಯಚೂರು: ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಸೈಯದ್ ಯಾಸೀನ್ ಅವರು ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ರಾಯಚೂರು ಜಿಲ್ಲೆಯಲ್ಲಿ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸೈಯದ್ ಯಾಸೀನ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಖ್ಯಾತ ಹಿನ್ನೆಲೆ ಗಾಯಕಿ, ಗಾನ ಕೊಗಿಲೆ ಎಸ್. ಜಾನಕಿ ನಿಧನ

ಸೈಯದ್ ಯಾಸೀನ್ ಅವರು ಪತ್ನಿ, ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗ, ಅಭಿಮಾನಿಗಳು ಮತ್ತು ರಾಜಕೀಯ ಸಹೋದ್ಯೋಗಿಗಳನ್ನು ಅಗಲಿದ್ದಾರೆ. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ರಾಯಚೂರು ಜಿಲ್ಲೆಯ ರಾಜಕೀಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ಸೈಯದ್ ಯಾಸೀನ್ ಅವರು ಕೇಂದ್ರದ ಮಾಜಿ ಸಚಿವ ದಿವಂಗತ ಸಿ.ಕೆ. ಜಾಫರ್ ಷರೀಫ್ ಅವರ ಅಳಿಯರಾಗಿದ್ದರು. ಅವರು ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಒಟ್ಟು ಆರು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1999 ಮತ್ತು 2008ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಮೈಸೂರು: ಗಾನಕೋಗಿಲೆ ಎಸ್. ಜಾನಕಿ ಅಂತಿಮ ದರ್ಶನಕ್ಕೆ ಜನಸಾಗರ

ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದ ಅವರು, ಜನಸಾಮಾನ್ಯರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ನಾಯಕರಾಗಿ ಗುರುತಿಸಿಕೊಂಡಿದ್ದರು. ಶಿಕ್ಷಣ, ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತರುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು.

ರಾಜಕೀಯ ಕ್ಷೇತ್ರದಲ್ಲಷ್ಟೇ ಅಲ್ಲದೆ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೆ, ಕೆಪಿಸಿಸಿಯ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಅಧ್ಯಕ್ಷರಾಗಿ ಪಕ್ಷ ಸಂಘಟನೆಗೆ ತಮ್ಮದೇ ಆದ ಕೊಡುಗೆ ನೀಡಿದ್ದರು.

ಇದನ್ನೂ ಓದಿ: S. Janaki: ಐದು ದಶಕಗಳಿಗೂ ಮೀರಿದ ಅಮೋಘ ಸಂಗೀತ ಪಯಣ

ಸೈಯದ್ ಯಾಸೀನ್ ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಜನಪ್ರತಿನಿಧಿಗಳು ಹಾಗೂ ಸಾಮಾಜಿಕ ಸಂಘಟನೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ. ಅವರ ಸರಳ ವ್ಯಕ್ತಿತ್ವ, ಜನಪರ ಕಾಳಜಿ ಹಾಗೂ ಪಕ್ಷದ ಸಂಘಟನೆಯಲ್ಲಿ ಸಲ್ಲಿಸಿದ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಗುತ್ತಿದೆ.

ಕುಟುಂಬದ ಮೂಲಗಳ ಪ್ರಕಾರ, ಸೈಯದ್ ಯಾಸೀನ್ ಅವರ ಅಂತ್ಯಕ್ರಿಯೆ ಭಾನುವಾರ ಸಂಜೆ ರಾಯಚೂರು ನಗರದ ಕಮಲಿವಾಲೆ ಬಾಬಾ ಕಬರಸ್ಥಾನದಲ್ಲಿ ನಡೆಯುವ ಸಾಧ್ಯತೆಯಿದೆ.