ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪೊಲೀಸರನ್ನು ಬೆದರಿಸುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವ ಅವರು, ‘ಪೊಲೀಸ್ ಠಾಣೆಗೆ ನುಗ್ಗುತ್ತೇನೆ’ ಎನ್ನುವವರಿಗೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಪ್ರತಾಪ್ ಸಿಂಹ ಅವರನ್ನು ಹೆಸರಿಸದೆ, ‘ಮೈಸೂರಿನ ಕಡೆಯ ಪೇಟೆ ರೌಡಿ’ ಎಂದು ಸಂಬೋಧಿಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
“ಅಸ್ತಿತ್ವ ಕಳೆದುಕೊಂಡ ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ, ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ” ಎಂದು ಟೀಕಿಸಿದ್ದಾರೆ.
“ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ. ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲು ಗೃಹ ಇಲಾಖೆ ಸನ್ನದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸೂಕ್ಷ್ಮ ಸಂದರ್ಭಗಳನ್ನು ಬಳಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪೊಲೀಸರ ನೈತಿಕ ಸ್ಥೈರ್ಯವನ್ನು ಕಸಿಯಲು ಬಿಡುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.




















