ಬೆಂಗಳೂರು: ಕರ್ನಾಟಕದ ಜನರಿಗೆ ಸಿಹಿಸುದ್ದಿಯೊಂದಿದೆ. ಭಾರೀ ಮಳೆ, ಗಾಳಿಯ ಆರ್ಭಟಕ್ಕೆ ಕಂಗೆಟ್ಟಿರುವ ಜನರು ತುಸು ನೆಮ್ಮದಿಯಿಂದ ಇರಬಹುದು. ಹೌದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಎಂಡಿಸಿ) ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಮಾಹಿತಿ ಅನ್ವಯ ಕೆಎಸ್‌ಎನ್‌ಎಂಡಿಸಿ ರಾಜ್ಯದ ಮಳೆ ಮುನ್ಸೂಚನೆ ನೀಡಿದೆ. ಮಂಗಳವಾರ ರಾಜ್ಯದ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಇಂದ ಅತಿ ಭಾರೀ ಮಳೆಯಾಗಲಿದೆ ಎಂದು ಹೇಳಿದೆ.
ಮಂಗಳವಾರ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಹಾಗೂ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಆಗಸ್ಟ್ 19ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಆದೇಶಿಸಿದ್ದಾರೆ.
ಭಾರೀ ಮಳೆಯ ಕಾರಣ ಆಗಸ್ಟ್ 18ರ ಸೋಮವಾರವೂ ರಜೆ ಘೋಷಿಸಲಾಗಿತ್ತು. ಉಳಿದಂತೆ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ. ಕೆಎಸ್‌ಎನ್‌ಎಂಡಿಸಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಮುಂದಿನ 7 ದಿನಗಳ ಮಳೆ ಮುನ್ಸೂಚನೆ: ರಾಜ್ಯದಾದ್ಯಂತ ಜೋರಾದ ಗಾಳಿಯೊಂದಿಗೆ ಮಂಗಳವಾರ ಮತ್ತು ಬುಧವಾರ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣದಿಂದ ಭಾರೀ ಮಳೆ, ಹಾಗೂ ಅಲ್ಲಲ್ಲಿ ಅತಿ ಭಾರೀ ಮಳೆ, ಮಂಗಳವಾರ ಅಲ್ಲಲ್ಲಿ ಅತ್ಯಅಧಿಕ ಮಳೆಯಾಗಲಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಜೋರಾದ ಗಾಳಿ ಬೀಸುತ್ತಿದೆ. ಸೋಮವಾರವೂ ನಗರದಲ್ಲಿ ತುಂತುರು ಮಳೆಯಾಗಿತ್ತು. ಮಂಗಳವಾರವೂ ಇದೇ ವಾತಾವರಣ ಮುಂದುವರೆಯಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ.
ಧಾರವಾಡದಲ್ಲಿ ರಜೆ: ಧಾರವಾಡ ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 19ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪಿಯು ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ. ಈ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಆದೇಶದಲ್ಲಿ ನಿರ್ದೇಶಿಸಿದ್ದಾರೆ.
ಉತ್ತರ ಕನ್ನಡದಲ್ಲೂ ರಜೆ: ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 (ಎಂ) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ, ಹಳಿಯಾಳ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ದಿನಾಂಕ 19/8/2025ರಂದು ರಜೆ ಘೋಷಿಸಲಾಗಿದೆ.
ಈ ಆದೇಶವನ್ನು, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ಶಿರಸಿ, ಉಪ ನಿರ್ದೇಶಕರು ಪದವಿ ಪೂರ್ವ ಕಾಲೇಜು ಅವರು ಕಾರ್ಯ ರೂಪಕ್ಕೆ ತರುವುದು.
ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರವಾರ, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ಶಿರಸಿ, ಉಪ ನಿರ್ದೇಶಕರು ಪದವಿ ಪೂರ್ವ ಕಾಲೇಜು ಅವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಎಂದು ಆದೇಶ ಹೇಳಿದೆ.