ಬೆಂಗಳೂರು: ರೈತರ ಆದಾಯ ಹೆಚ್ಚಿಸುವುದರ ಜತೆಗೆ ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿಸುವ ಉದ್ದೇಶದಿಂದ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ಸಾಮಾನ್ಯವಾಗಿ ಕೃಷಿಯಲ್ಲಿ ಇಳುವರಿ ಹೆಚ್ಚಳಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಆದರೆ, ಈ ಯೋಜನೆಯಡಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಸಂಸ್ಕರಣೆಗೆ ಒತ್ತು ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ಉಪ ಉತ್ಪನ್ನಗಳ ತಯಾರಿಕೆ ಹಾಗೂ ಪರ್ಯಾಯ ಕೃಷಿ ಉದ್ಯಮಗಳ ಸ್ಥಾಪನೆಗೆ ಉತ್ತೇಜನ ನೀಡಲಾಗುತ್ತದೆ.
ಇದರ ಜತೆಗೆ ಕೃಷಿ ತ್ಯಾಜ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚುವರಿ ಆದಾಯ ಗಳಿಸುವ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ರೈತರು, ರೈತ ಗುಂಪುಗಳು ಹಾಗೂ ರೈತ ಉತ್ಪಾದಕ ಸಂಸ್ಥೆಗಳು (ಎಫ್ಪಿಒ) ಸಂಬಂಧಿತ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕಗಳನ್ನು ಸ್ಥಾಪಿಸಲು ಸರ್ಕಾರದ ವತಿಯಿಂದ ಸಹಾಯಧನ ಒದಗಿಸಲಾಗುತ್ತದೆ. ಕೃಷಿಯನ್ನು ಕೇವಲ ಇಳುವರಿ ಆಧಾರಿತ ಚಟುವಟಿಕೆಯಾಗಿರದೆ, ಮೌಲ್ಯವರ್ಧನೆ ಮೂಲಕ ಆದಾಯ ತರುವ ಉದ್ಯಮವನ್ನಾಗಿ ರೂಪಿಸುವುದು ಯೋಜನೆಯ ಆಶಯವಾಗಿದೆ.




















