ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯುವ ಕುರಿತು ಚರ್ಚೆಗಳು ಆರಂಭವಾಗಿದ್ದವು. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಹತ್ವದ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ದೇವೇಗೌಡರು,”ಮೋದಿ ನನ್ನ ಸಂಬಂಧ ಬದಲಾವಣೆ ಮಾಡಲು ಆಗುವುದಿಲ್ಲ. ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ” ಎಂದು ಘೋಷಣೆ ಮಾಡಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದೆಯೇ? ಎಂಬ ಪ್ರಶ್ನೆಗೆ ಉತ್ತರ ನೀಡಿದ ದೇವೇಗೌಡರು, “ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಕಾರಣಕ್ಕೂ ಆತಂಕ ಎದುರಾಗುವುದಿಲ್ಲ. ಬಿಜೆಪಿ ಜೊತೆ ಮೈತ್ರಿ ಮುಂದುವರೆಯುತ್ತದೆ” ಎಂದರು.
“ಜಿಲ್ಲಾ, ತಾಲೂಕು, ಜಿಬಿಎ, ವಿಧಾನಸಭೆ ಸೇರಿ ಎಲ್ಲಾ ಚುನಾವಣೆಗಳಿಗೂ ಈ ಮೈತ್ರಿ ಮುಂದುವರೆಯಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿಗೆ ಎಂದೂ ಆತಂಕವಿಲ್ಲ. ನನ್ನ ಮೋದಿ ಸಂಬಂಧ ಉತ್ತಮವಾಗಿದೆ. ಇದೇ ಮೈತ್ರಿಗೆ ಅಡಿಪಾಯವಾಗಿದೆ. ನನ್ನ ಮೋದಿ ಸಂಬಂಧ ಯಾವುದೇ ಕಾರಣಕ್ಕೂ ಯಾರೂ ಬದಲಾವಣೆ ಮಾಡುವುದಕ್ಕೆ ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ಕುಮಾರಸ್ವಾಮಿ ಆರೋಗ್ಯ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಕುರಿತು ದೇವೇಗೌಡರು ಮಾತನಾಡಿದರು. “ಕುಮಾರಸ್ವಾಮಿ 4 ತಿಂಗಳಿನಿಂದ ರಾಜ್ಯ ಪ್ರವಾಸ ಮಾಡಿಲ್ಲ. ಸ್ವಲ್ಪ ಆರೋಗ್ಯ ಸುಧಾರಣೆ ಆಗಬೇಕಿತ್ತು. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ, ಆರೋಗ್ಯ ಸರಿಯಾಗಿದೆ” ಎಂದರು.
“ವಿದೇಶದಿಂದಲೂ ವೈದ್ಯರು ಬಂದು ಪರಿಶೀಲನೆ ಮಾಡಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ. ಅವರು ರಾಜಕೀಯದಲ್ಲಿ ಎಷ್ಟು ಬೇಕಾದರೂ ಹೋರಾಟ ಮಾಡುವುದಕ್ಕೆ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ. ಕೆಲವೇ ದಿನಗಳಲ್ಲಿ ಅವರು ರಾಜ್ಯ ಪ್ರವಾಸ ಮಾಡಲಿದ್ದಾರೆ” ಎಂದು ಹೇಳಿದರು.
ಎನ್‌ಡಿಎ ಮಿತ್ರಪಕ್ಷ: 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಅಚ್ಚರಿಯ ರೀತಿಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿಗೆ ಬೆಂಬಲ ನೀಡಿತು. 2024ರ ಲೋಕಸಭೆ ಚುನಾವಣೆಯನ್ನು ಎರಡೂ ಪಕ್ಷಗಳು ಸೀಟು ಹಂಚಿಕೆ ಮಾಡಿಕೊಂಡು ಎದುರಿಸಿದವು.
ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಜೆಡಿಎಸ್ ಪ್ರಮುಖ ಮಿತ್ರಪಕ್ಷ. ಮಂಡ್ಯ ಸಂಸದ, ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ 3.0 ಸಂಪುಟದಲ್ಲಿ ಸಚಿವರು. ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟವನ್ನು ನಡೆಸುತ್ತಿವೆ.