ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ರಾಜ್ಯದ 2ಎ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಡಿ. 10ರಂದು ಸುವರ್ಣ ವಿಧಾನಸೌಧದ ಬಳಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ರಾಜ್ಯದ ವಿವಿಧೆಡೆಯಿಂದ ಸಹಸ್ರಾರು ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಶ್ರೀ ಬಸವಜಯಮೃತ್ಯುಂಜಯ ಮಹಾಸ್ವಾಮೀಜಿ ತಿಳಿಸಿದರು.
ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗಾಗಿ ಪಂಚಮಸಾಲಿ ಸಮುದಾಯಕ್ಕೆ ರಾಜ್ಯದಲ್ಲಿ 2ಎ ಮೀಸಲಾತಿ ನೀಡಬೇಕು. ಲಿಂಗಾಯತ ಉಪಸಮುದಾಯಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಕೂಡಲೇ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.
ಲಾಠಿ ಪ್ರಹಾರ ನಡೆದ ದಿನವೇ ಮತ್ತೆ ಧರಣಿ: 2024ರ ಡಿ. 10ರಂದು ಮೀಸಲಾತಿಗಾಗಿ ನಡೆದ ಹೋರಾಟದ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದರು. ಆ ಘಟನೆಯ ನೆನಪಿನಲ್ಲಿ ಡಿ. 10 ಅನ್ನು `ಲಿಂಗಾಯತರ ಮೇಲಿನ ದೌರ್ಜನ್ಯ ದಿನ’ವಾಗಿ ಆಚರಿಸಲು ತೀರ್ಮಾನಿಸಿದ್ದೇವೆ. ಅದೇ ದಿನ ಬೆಳಗಾವಿಯಲ್ಲಿ ಮತ್ತೆ ಸತ್ಯಾಗ್ರಹ ನಡೆಸಲಿದ್ದೇವೆ ಎಂದು ಸ್ವಾಮೀಜಿ ಹೇಳಿದರು.
`ಮನೆಗೊಬ್ಬರಂತೆ, ಊರಿಗೊಂದು ವಾಹನದಂತೆ ಸಮಾಜದವರು ಬರಬೇಕು. ಉಪವಾಸ ಮಾಡಲು ಸಾಧ್ಯವಾಗದವರು ಪ್ರಸಾದ ಸ್ವೀಕರಿಸಿ ಧರಣಿಯಲ್ಲಿ ಪಾಲ್ಗೊಳ್ಳಬಹುದು’ ಎಂದು ಅವರು ಮನವಿ ಮಾಡಿದರು.
ಮುಖ್ಯಮಂತ್ರಿ ಸ್ಪಂದಿಸಲಿ: ಆರು ವರ್ಷಗಳಿಂದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈಗಾಗಲೇ ಮನವಿ ಸಲ್ಲಿಸಿದ್ದೇವೆ. ಈ ಹಿಂದೆ ಸಮಾಜದ ಬೇಡಿಕೆಗೆ ಸ್ಪಂದಿಸುವುದಾಗಿ ಹೇಳಿದ್ದರು. ಈಗ ಅವರಿಗೆ ಅವಕಾಶ ಸಿಕ್ಕಿದೆ. ಮೀಸಲಾತಿ ಕಲ್ಪಿಸಬೇಕು. ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದರು.
ಹಿಂದಿನ ಬೊಮ್ಮಾಯಿ ಸರ್ಕಾರ ನೀಡಿದ್ದ 2ಡಿ ಮೀಸಲಾತಿ ವಿಚಾರ ಸುಪ್ರೀಂ ಕೋರ್ಟ್ನಲ್ಲಿದೆ ಎಂದು ಹೇಳಿದ ಸ್ವಾಮೀಜಿ, ಆ ಮೀಸಲಾತಿಯನ್ನಾದರೂ ಜಾರಿಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.






















