SK Home Ad
Home ಸುದ್ದಿ ರಾಜ್ಯ ಕರ್ನಾಟಕದಲ್ಲಿ ಚಳಿಯ ಅಬ್ಬರ: 11 ಡಿಗ್ರಿಗೆ ಇಳಿಯಲಿದೆ ತಾಪಮಾನ

ಕರ್ನಾಟಕದಲ್ಲಿ ಚಳಿಯ ಅಬ್ಬರ: 11 ಡಿಗ್ರಿಗೆ ಇಳಿಯಲಿದೆ ತಾಪಮಾನ

0
2

ಬೆಂಗಳೂರು: ರಾಜ್ಯದಲ್ಲಿ ಸದ್ಯ ಒಣಹವೆ ಮುಂದುವರಿದಿದ್ದು, ಮುಂದಿನ ಎರಡು ದಿನಗಳಲ್ಲೂ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಇರಲಿದ್ದು ಚಳಿಯ ವಾತಾವರಣ ಸೃಷ್ಟಿಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇಲ್ಲ.

ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಳನಾಡಿನಲ್ಲಿ 4 ಡಿಗ್ರಿ ಕುಸಿತ: ಚಳಿಯ ವಾತಾವರಣ ಸೃಷ್ಟಿಯಾಗುವುದ ರಿಂದ ರಾಜ್ಯದ ಒಳನಾಡಿನಲ್ಲಿ ಕನಿಷ್ಠ ತಾಪಮಾನ 4 ಡಿಗ್ರಿಗಳಷ್ಟು ಕುಸಿಯುವ ಸಾಧ್ಯತೆಗಳಿವೆ. ಕೆಲವಡೆ ಪ್ರಸ್ತುತ ಕನಿಷ್ಠ ತಾಪಮಾನ 15ರಿಂದ 16 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದ್ದು, ಹವಾಮಾನ ವೈಪರೀತ್ಯದಿಂದ 11ರಿಂದ 12 ಡಿಗ್ರಿಗೆ ಕುಸಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.