Home ಸುದ್ದಿ ರಾಜ್ಯ SL Bhyrappa: ಹಿರಿಯ ಸಾಹಿತಿ ಎಸ್‌.ಎಲ್.ಭೈರಪ್ಪ ವಿಧಿವಶ

SL Bhyrappa: ಹಿರಿಯ ಸಾಹಿತಿ ಎಸ್‌.ಎಲ್.ಭೈರಪ್ಪ ವಿಧಿವಶ

0

ಸರಸ್ವತಿ ಸಮ್ಮಾನ್ ಮತ್ತು ಪದ್ಮಭೂಷಣ ಪುರಸ್ಕೃತ ಕನ್ನಡದ ಪ್ರಮುಖ ಕಾದಂಬರಿಕಾರ, ಚಿಂತಕ, ಹಿರಿಯ ಸಾಹಿತಿ ಎಲ್‌.ಎಲ್.ಭೈರಪ್ಪ (94) ವಿಧಿವಶರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಧ್ಯಾಹ್ನ 2.38ರ ಸುಮಾರಿಗೆ ನಿಧನ ಹೊಂದಿದರು.

ಎಸ್.ಎಲ್.ಭೈರಪ್ಪ ನಿವಾಸ ಮೈಸೂರು ನಗರದಲ್ಲಿದೆ. ಆದರೆ ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಮೂರು ತಿಂಗಳಿನಿಂದ ಬೆಂಗಳೂರು ನಗರದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ದಿನಗಳ ಹಿಂದೆ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಪತ್ರಕರ್ತ ವಿಶ್ವೇಶ್ವರ ಭಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಪದ್ಮಭೂಷಣ ಪುರಸ್ಕೃತರು: ಎಸ್.ಎಲ್.ಭೈರಪ್ಪ ಪೂರ್ಣ ಹೆಸರು ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ. 1934ರ ಜುಲೈ 26ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಗ್ರಾಮದಲ್ಲಿ ಅವರು ಜನಿಸಿದ್ದರು. ಕನ್ನಡದ ಆಧುನಿಕ ಸಾಹಿತ್ಯದ ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರು ಎಸ್.ಎಲ್‌.ಭೈರಪ್ಪ. ಕನ್ನಡದಲ್ಲಿ ಅವರು ಬರೆದ ಕಾದಂಬರಿ ಅತಿ ಹೆಚ್ಚು ಮಾರಾಟ ಕಂಡಿದ್ದಲ್ಲದೇ ಹಿಂದಿ, ಮರಾಠಿ, ಮತ್ತು ಆಂಗ್ಲ ಸೇರಿದಂತೆ ಹಲವು ಭಾರತೀಯ ಭಾಷೆಗಳಿಗೆ ಅನುವಾದವಾಗಿವೆ. ಎಸ್. ಎಲ್. ಭೈರಪ್ಪ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ್ದ ಕೊಡುಗೆ ಪರಿಗಣಿಸಿ 2010 ಸರಸ್ವತೀ ಸಮ್ಮಾನ್, 1975ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2023ರಲ್ಲಿ ಪದ್ಮಭೂಷಣ ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿಗಳನ್ನು ನೀಡಲಾಗಿತ್ತು. ಡಾ. ಎಸ್. ಎಲ್. ಭೈರಪ್ಪ ಪ್ರತಿಷ್ಠಾನ (ರಿ) ಕೆಲವು ದಿನಗಳ ಹಿಂದೆ ಉದ್ಘಾಟನೆಗೊಂಡಿತ್ತು.

ಸಿದ್ದರಾಮಯ್ಯ ಸಂತಾಪ: ಎಸ್.ಎಲ್.ಭೈರಪ್ಪ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ‘ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು’ ಎಂದು ಹೇಳಿದ್ದಾರೆ.

ಸಂತಾಪಗಳು

  • ಎಸ್.ಎಲ್.ಭೈರಪ್ಪ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿ, ‘ನಾಡಿನ ಸಾಕ್ಷಿ ಪ್ರಜ್ಞೆಯಂತಿದ್ದ ಅದ್ವಿತೀಯ ಸಾಹಿತಿ, ಕನ್ನಡ ಸಾರಸ್ವತ ಲೋಕಕ್ಕೆ ‘ಸರಸ್ವತಿ ಸಮ್ಮಾನ್’ ಗೌರವವನ್ನು ತಂದುಕೊಟ್ಟ, ಪದ್ಮಭೂಷಣ ಡಾ|| ಎಸ್.ಎಲ್.ಭೈರಪ್ಪನವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ಆಘಾತವಾಗಿದೆ. ಕನ್ನಡ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಮೆರೆಸಿದ, ದೇಶ ವಿದೇಶಗಳ ಸಾಹಿತ್ಯಾಸಕ್ತರ ನೆಚ್ಚಿನ ಸಾಹಿತಿಗಳಾಗಿದ್ದ, ಆ ಹಿರಿಯ ಸಾಹಿತಿಯನ್ನು ಕಳೆದುಕೊಂಡು ಕನ್ನಡ ನಾಡು, ನುಡಿ ಅನಾಥವಾದಂತಾಗಿದೆ, ಒಬ್ಬ ದಿಗ್ಗಜ ಸಾಹಿತಿಯನ್ನು, ಸಾಧಕ ಶ್ರೇಷ್ಠರನ್ನು ನಾವು ಕಳೆದುಕೊಂಡಿದ್ದೇವೆ. ಆ ದಿವ್ಯ, ಸಾರಸ್ವತ ಚೇತನಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಡಾ.ಭೈರಪ್ಪನವರು ತಮ್ಮ ಅಗಾಧ ಪಾಂಡಿತ್ಯಪೂರ್ಣ ಕಾದಂಬರಿಗಳ ಮೂಲಕ ಭಾರತೀಯ ಸಂಸ್ಕೃತಿ, ಇತಿಹಾಸ, ತತ್ವಶಾಸ್ತ್ರ ಮತ್ತು ಮಾನವ ಸಂಬಂಧಗಳನ್ನು ಅತ್ಯಂತ ಆಳವಾಗಿ ವಿಶ್ಲೇಷಿಸುವ ಅಪೂರ್ವ ಕೃತಿಗಳನ್ನು ರಚಿಸಿ, ನಾಡಿನ ಸಾರಸ್ವತ ಪ್ರಪಂಚವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ವಂಶವೃಕ್ಷ, ಪರ್ವ, ಸಾರ್ಥ, ಆವರಣದಂತಹ ಕೃತಿಗಳು ಕನ್ನಡ ಸಾಹಿತ್ಯಕ್ಕೆ ಒಂದು ಹೊಸ ದಿಕ್ಕನ್ನೇ ನೀಡಿವೆ. ಅಗಲಿದ ಮಹಾನ್ ಚೇತನಕ್ಕೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತಾ, ಅವರ ಕುಟುಂಬದವರಿಗೆ, ಅಪಾರ ಅಭಿಮಾನಿಗಳಿಗೆ ಆ ಮೇರು ವ್ಯಕ್ತಿತ್ವದ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ’ ಎಂದು ಹೇಳಿದ್ದಾರೆ.
  • ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಸಂತಾಪ ಸೂಚಿಸಿ, ‘ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್ ಪುರಸ್ಕೃತರಾದ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ . ಓಂ ಶಾಂತಿ’ ಎಂದು ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version