ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿವೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಬೆಂಬಲಿಗ ಶಾಸಕ ಇಕ್ಬಾಲ್ ಅಹ್ಮದ್ ಒತ್ತಾಯಿಸಿದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ತಾವೂ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
“ನಾನು ಯಾಕೆ ಮುಖ್ಯಮಂತ್ರಿ ಆಗಬಾರದು?” ಎಂದು ಪ್ರಶ್ನಿಸುವ ಮೂಲಕ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್, ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್‌ನ ವಿವೇಚನೆಗೆ ಬಿಟ್ಟಿದ್ದು, ಸೂಕ್ತ ಸಮಯದಲ್ಲಿ ಅವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಆದರೆ ಈ ಹೇಳಿಕೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಮತ್ತೆ ಮುಂಚೂಣಿಗೆ ಬಂದಿದೆ ಎಂಬ ವಿಶ್ಲೇಷಣೆಗಳಿಗೆ ಕಾರಣವಾಗಿದೆ. ಇದೇ ಸಮಯದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಔತಣಕೂಟ ಏರ್ಪಡಿಸಿದ್ದಾರೆ. ಸಾಮಾನ್ಯವಾಗಿ ನಡೆಯುವ ಭೋಜನ ಕೂಟ ಇದಾಗಿದ್ದರೂ, ಈಗಿನ ರಾಜಕೀಯ ಪರಿಸ್ಥಿತಿಯಲ್ಲಿ ಇದು ಕುತೂಹಲಕ್ಕೆ ಕಾರಣವಾಗಿದೆ.
ಡಿ.ಕೆ. ಶಿವಕುಮಾರ್ ಬಣದ ಶಾಸಕರ ಹೇಳಿಕೆಗಳಿಗೆ ಪ್ರತಿಯಾಗಿ ಸಿದ್ದರಾಮಯ್ಯ ಬಣವೂ ದಾಳ ಉರುಳಿಸಲು ಆರಂಭಿಸಿದೆ ಎಂದು ರಾಜಕೀಯ ವಲಯದಲ್ಲಿ ಹೇಳಲಾಗುತ್ತಿದೆ. ಪರಮೇಶ್ವರ್ ತಮ್ಮ ಇಲಾಖೆಯ ಬಗ್ಗೆಯೂ ಮಾಹಿತಿ ನೀಡಿದ್ದು, ಪೊಲೀಸ್ ಇಲಾಖೆಯಲ್ಲಿ 15,000 ಹುದ್ದೆಗಳು ಖಾಲಿ ಇವೆ. ಅದರಲ್ಲಿ 4,600 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 545 ಪಿಎಸ್‌ಐಗಳಿಗೆ ತರಬೇತಿ ನೀಡಲಾಗುತ್ತಿದ್ದು, 402 ಹೊಸ ಪಿಎಸ್‌ಐಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ.
ಒಟ್ಟಾರೆ 600 ಪಿಎಸ್‌ಐಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆಂತರಿಕ ಮೀಸಲಾತಿ ಜಾರಿಯಿಂದ ನೇಮಕಾತಿ ಪ್ರಕ್ರಿಯೆ ನಿಂತು ಹೋಗಿತ್ತು, ಈಗ ಮತ್ತೆ ಆರಂಭವಾಗಲಿದೆ. ವಯಸ್ಸಿನ ಮಿತಿಯನ್ನೂ ಸಡಿಲಿಸಲಾಗುತ್ತಿದೆ ಎಂದು ಹೇಳಿದರು. ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ಸಂಬಂಧಿಸಿದಂತೆ ಪ್ರತಿ ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡುವ ನಿಯಮ ಜಾರಿಗೆ ತರಲಾಗಿದೆ ಎಂದೂ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.