SK Home Ad
Home ಸುದ್ದಿ ರಾಜ್ಯ ಮುಂದಿನ ಕೆಲ ದಿನ ಮಳೆ ಜೋರು: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮುಂದಿನ ಕೆಲ ದಿನ ಮಳೆ ಜೋರು: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

0
114

ಕರಾವಳಿಯಿಂದ ಒಳನಾಡುವರೆಗೂ ಮಳೆಯ ಮುನ್ಸೂಚನೆ; ಜನರಿಗೆ ಎಚ್ಚರಿಕೆ ಸಂದೇಶ

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಮಳೆಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ. ಎಸ್‌. ಪಾಟೀಲ್‌ ತಿಳಿಸಿದ್ದಾರೆ.

ಸಂಯುಕ್ತ ಕರ್ನಾಟಕದ Digital ವಿಭಾಗಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಳೆಯ ಮುನ್ಸೂಚನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಗದಗ, ಧಾರವಾಡ, ಹಾವೇರಿ, ಕೊಪ್ಪಳ, ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದು ಅಥವಾ ಎರಡು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಇದರೊಂದಿಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದೇ ರೀತಿ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಲ್ಲೂ ಮಳೆ : ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ ಪ್ರದೇಶಗಳಲ್ಲಿ ತಂಪಾದ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ : ಯೆಲ್ಲೋ ಅಲರ್ಟ್ ಘೋಷಿಸದ ಜಿಲ್ಲೆಗಳಲ್ಲೂ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಬಾಗಲಕೋಟೆ, ಬೆಳಗಾವಿ, ಬಿದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಬಿರುಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ಇರಬಹುದು ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಮಳೆ ಸಾಧ್ಯತೆ : ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಶೇಷವಾಗಿ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ವಾಹನ ಸವಾರರು ಮತ್ತು ಕಚೇರಿಯಿಂದ ಮನೆಗೆ ತೆರಳುವ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಸಾರ್ವಜನಿಕರಿಗೆ ಹಾಗೂ ರೈತರಿಗೆ ಮುನ್ನೆಚ್ಚರಿಕೆ : ಭಾರಿ ಮಳೆ ಮತ್ತು ಬಿರುಗಾಳಿ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ. ಗುಡುಗು ಮತ್ತು ಮಿಂಚಿನ ಸಂದರ್ಭಗಳಲ್ಲಿ ಮರಗಳ ಕೆಳಗೆ ನಿಲ್ಲದಂತೆ ಹಾಗೂ ಹಳೆಯ ಅಥವಾ ದುರ್ಬಲ ಕಟ್ಟಡಗಳ ಸಮೀಪ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ರೈತರು ತಮ್ಮ ಬೆಳೆಗಳು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕೊಯ್ಲಿಗೆ ಸಿದ್ಧವಾಗಿರುವ ಬೆಳೆಗಳನ್ನು ಸುರಕ್ಷಿತವಾಗಿ ಸಂರಕ್ಷಿಸುವುದು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು ಸೂಕ್ತ ಎಂದು ಇಲಾಖೆ ಸಲಹೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹವಾಮಾನ ಇಲಾಖೆಯ ಅಧಿಕೃತ ಮುನ್ಸೂಚನೆಗಳನ್ನು ಗಮನಿಸುತ್ತಿರಬೇಕು.