Home ಸುದ್ದಿ ರಾಜ್ಯ ಅ.18ರವರೆಗೆ ದಸರಾ ರಜೆ ವಿಸ್ತರಣೆ: ಮಕ್ಕಳು ಖುಷ್!

ಅ.18ರವರೆಗೆ ದಸರಾ ರಜೆ ವಿಸ್ತರಣೆ: ಮಕ್ಕಳು ಖುಷ್!

0

ಕರ್ನಾಟಕದಲ್ಲಿ ನಡೆಯುತ್ತಿರುವ ಮಹತ್ವದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಕಾರಣದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ದಸರಾ ರಜೆಯ ಜೊತೆಗೆ ಹೆಚ್ಚುವರಿ ರಜೆಯ ಮಜ ಸಿಕ್ಕಂತಾಗಿದೆ.

ವಾಸ್ತವವಾಗಿ, ಅಕ್ಟೋಬರ್ 7ಕ್ಕೆ ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಸಮೀಕ್ಷಾ ಕಾರ್ಯ ಪೂರ್ಣಗೊಳ್ಳದ ಕಾರಣ, ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ, ಸಮೀಕ್ಷೆಯ ಅವಧಿಯನ್ನು ವಿಸ್ತರಿಸಲು ತೀರ್ಮಾನಿಸಿದರು.

ಈ ಸಮೀಕ್ಷೆಗೆ ಸುಮಾರು 1.20 ಲಕ್ಷ ಶಿಕ್ಷಕರು ನಿಯೋಜನೆಗೊಂಡಿದ್ದು, ಸಮೀಕ್ಷಾ ಕಾರ್ಯವನ್ನು ಸಂಪೂರ್ಣವಾಗಿ ಮುಗಿಸಲು ಶಿಕ್ಷಕರನ್ನು ಬಳಸಿಕೊಳ್ಳುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ಸಂಘದಿಂದಲೂ ರಜೆ ವಿಸ್ತರಣೆಗೆ ಮನವಿ ಬಂದಿತ್ತು. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಅಕ್ಟೋಬರ್ 8 ರಿಂದ ಅಕ್ಟೋಬರ್ 18ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ರಜೆ ವಿಸ್ತರಣೆಯು ಸಮೀಕ್ಷೆಯ ಯಶಸ್ಸಿಗೆ ನಿರ್ಣಾಯಕವಾಗಿದೆ. ಸಮೀಕ್ಷೆಯ ನಿಖರತೆ ಮತ್ತು ಪೂರ್ಣತ್ವವು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ, ವಿಶೇಷವಾಗಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಸಂಬಂಧಿಸಿದ ನೀತಿ ನಿರೂಪಣೆಗೆ ಮಹತ್ವದ ಮಾಹಿತಿ ಒದಗಿಸುತ್ತದೆ. ಬೆಂಗಳೂರಿನಲ್ಲಿಯೇ 6,700 ಶಿಕ್ಷಕರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಅವರ ಶ್ರಮ ಮಹತ್ವದ್ದು. ಆದರೆ, ಪದವಿ ಪೂರ್ವ ಕಾಲೇಜು (PUC) ಉಪನ್ಯಾಸಕರು ಸಮೀಕ್ಷೆಯಲ್ಲಿ ಭಾಗಿಯಾಗುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ‌

ಈ ರಜೆಯು ಕೇವಲ ಸಮೀಕ್ಷೆಗೆ ಅನುಕೂಲ ಮಾಡಿಕೊಡುವುದಲ್ಲದೆ, ವಿದ್ಯಾರ್ಥಿಗಳಿಗೆ ದಸರಾ ಸಂಭ್ರಮದೊಂದಿಗೆ, ಇದು ಇನ್ನೊಂದು ಅವಕಾಶವನ್ನು ಕಲ್ಪಿಸಿದೆ. ಈ ಹೆಚ್ಚುವರಿ ರಜೆಯು ಮಕ್ಕಳಲ್ಲಿ ಸೃಜನಶೀಲತೆ, ಆಟಪಾಠ ಹಾಗೂ ಕಲಿಕಾ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶ ನೀಡಲಿದೆ. ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಲು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇದು ಉತ್ತಮ ಅವಕಾಶ ಒದಗಿಸುತ್ತದೆ.

ಸಭೆ ಬಳಿಕ ಸಿಎಂ ಹೇಳಿದ್ದೇನು?:ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇಂದು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿಲ್ಲ. ಕೊಪ್ಪಳದಲ್ಲಿ‌‌ ಸಮೀಕ್ಷೆ ಕಾರ್ಯ ಶೇ.97 ಪೂರ್ಣವಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗವು ಈ ಬಗ್ಗೆ ಚರ್ಚಿಸಿದೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ.

ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 ಕೆಲಸದ ದಿನಗಳ ರಜೆ ವಿಸ್ತರಿಸಲಾಗಿದೆ.

ಇದೇ 12ನೇ ತಾರೀಕಿನಿಂದ ದ್ವಿತೀಯ ಪಿ.ಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ 6,700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ.

ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದುದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ ಜಿಬಿಎ ವ್ಯಾಪ್ತಿಯಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ

NO COMMENTS

LEAVE A REPLY

Please enter your comment!
Please enter your name here

Exit mobile version