ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು, ಐದು ದಿನಗಳ ಕಾಲ ಸೆ. 7ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನ ಹಾಗೂ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಹಲವೆಡೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಗ್ರಾಮಾಂತರ, ರಾಮನಗರದ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ವಿವಿಧೆಡೆ ಮಂಗಳವಾರ ಹೆಚ್ಚಿನ ಮಳೆ ವರದಿಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ತಿಳಿಸಿದೆ.
ನೈಋತ್ಯ ಮುಂಗಾರು ಚೇತರಿಸಿಕೊಂಡಿದ್ದು, ಈ ವಾರದ ಅಂತ್ಯದವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಅದೇ ರೀತಿ ಕರಾವಳಿಗೆ ಹೊಂದಿಕೊಂಡಿರುವ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮಂಗಳವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಬಂಗಾಳ ಕೊಲ್ಲಿಯ ಉತ್ತರ ಭಾಗದ ಒಡಿಶಾ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿವೆ. ಇದರಿಂದ ಸೆ. 7ರವರೆಗೆ ಕೊಪ್ಪಳ, ಬೀದರ್ ಹಾಗೂ ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಹಾಗೂ ಭಾರಿ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿತ್ತು.