SK Home Ad
Home ಸುದ್ದಿ ರಾಜ್ಯ ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಮೂವರಿಗೆ ಪ್ರಶಸ್ತಿ ಘೋಷಣೆ

ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಮೂವರಿಗೆ ಪ್ರಶಸ್ತಿ ಘೋಷಣೆ

0
102

ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘ (KUWJ) ನೀಡುವ 2025-26ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ಮೂವರು ಸಾಧಕಿಯರನ್ನು ಆಯ್ಕೆ ಮಾಡಲಾಗಿದೆ. ಪತ್ರಿಕೋದ್ಯಮ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ನೀಡಲಾಗುವ ಈ ಪ್ರಶಸ್ತಿಗಳು ಈ ಬಾರಿ ಹಿರಿಯ ಪತ್ರಕರ್ತೆಯರು ಹಾಗೂ ಸಾಮಾಜಿಕ ಹೋರಾಟಗಾರ್ತಿಯರ ಪಾಲಾಗಿವೆ.

ಸಂಯುಕ್ತ ಕರ್ನಾಟಕ ಪತ್ರಿಕೆಯ ಹುಬ್ಬಳ್ಳಿ ಬ್ಯುರೊದಲ್ಲಿ ಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿರುವ ತನುಜಾ ನಾಯಕ ಅವರನ್ನೂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಳೆದ ಎರಡೂವರೆ ದಶಕಕ್ಕೂ ಹೆಚ್ಚು ಕಾಲ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ, ಸ್ತ್ರೀಪರ ಕಾಳಜಿವುಳ್ಳ ಅವರು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: 3 ರಾಜ್ಯಗಳು ಒಟ್ಟಾಗಿ ನೀರಾವರಿ ಸಮಸ್ಯೆ ಬಗೆಹರಿಸೋಣ: ಡಿಕೆ

ಇದೇ ವಿಭಾಗದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಹಿರಿಯ ಪತ್ರಕರ್ತೆ ಹಾಗೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ನಿವೃತ್ತ ಸುದ್ದಿ ಸಂಪಾದಕಿ ಉತ್ತರಾಕುಮಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಹಲವು ದಶಕಗಳ ಕಾಲ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು ವೃತ್ತಿಪರತೆ, ನಿಷ್ಪಕ್ಷಪಾತ ವರದಿಗಾರಿಕೆ ಹಾಗೂ ಸಂಪಾದಕೀಯ ಕೌಶಲ್ಯಕ್ಕಾಗಿ ಹೆಸರುವಾಸಿಯಾಗಿದ್ದಾರೆ.

ಪತ್ರಿಕೋದ್ಯಮ ಕ್ಷೇತ್ರದ ಹೊರತಾಗಿ ವಿಶಿಷ್ಟ ಸಾಧನೆಗಾಗಿ ನೀಡಲಾಗುವ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ಇಂಡಿ ಮೂಲದ ಡಾ. ಭುವನೇಶ್ವರಿ ಕಾಂಬಳೆ ಅವರನ್ನು ಆಯ್ಕೆ ಮಾಡಲಾಗಿದೆ. ಮಹಿಳಾ ವಲಸೆ ಕಾರ್ಮಿಕರ ಹಕ್ಕುಗಳ ರಕ್ಷಣೆ, ಸಂಘಟನೆ ಹಾಗೂ ಸಬಲೀಕರಣಕ್ಕಾಗಿ ಅವರು ಹಲವು ವರ್ಷಗಳಿಂದ ಶ್ರಮಿಸುತ್ತಿದ್ದು, ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಆರ್. ಪೂರ್ಣಿಮಾ ಪ್ರಕಟಣೆ ನೀಡಿದ್ದು, ಜುಲೈ ಎರಡನೇ ವಾರದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಮಾಜಮುಖಿ ಪತ್ರಿಕೋದ್ಯಮ ಮತ್ತು ಮಹಿಳಾ ಸಬಲೀಕರಣಕ್ಕೆ ಕೊಡುಗೆ ನೀಡಿದ ಸಾಧಕಿಯರನ್ನು ಗುರುತಿಸಿ ಗೌರವಿಸುವ ಮೂಲಕ ಸಂಘವು ಮಹಿಳಾ ಸಾಧನೆಗೆ ಮತ್ತಷ್ಟು ಉತ್ತೇಜನ ನೀಡುತ್ತಿದೆ.