ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆ ಹಾಗೂ ಅಲ್ಲಿನ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರ ಒತ್ತಾಯಿಸಿದೆ.
ಈ ಕುರಿತು ವಿಧಾನಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ಬಳಿಕ, ಕರಡು ಅಧಿಸೂಚನೆಯನ್ನು ಯಥಾವತ್ತಾಗಿ ಅಂಗೀಕರಿಸಲು ಸಾಧ್ಯವಿಲ್ಲ ಎಂಬ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಅಧಿಸೂಚನೆಯಲ್ಲಿರುವ ಗೊಂದಲಗಳು ಹಾಗೂ ನ್ಯೂನ್ಯತೆಗಳನ್ನು ಸರಿಪಡಿಸುವ ಅಗತ್ಯವಿದ್ದು, ಈ ಸಂಬಂಧ ಸರ್ವಾನುಮತದ ನಿರ್ಣಯವನ್ನೂ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
ವರದಿಯಲ್ಲಿನ ಲೋಪಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ಸರ್ಕಾರ ನಿರ್ಧರಿಸಿದೆ. ಜತೆಗೆ ಪಶ್ಚಿಮ ಘಟ್ಟ ಪ್ರದೇಶದ ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳಲು ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೆ ನಡೆಸುವ ಅಗತ್ಯವಿದೆ ಎಂದು ಸರ್ಕಾರ ತಿಳಿಸಿದೆ.
ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಭೌತಿಕ ಸರ್ವೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಕನಿಷ್ಠ ಒಂದು ವರ್ಷದ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.
“ಗ್ರಾಮ ಮಟ್ಟದಲ್ಲಿ ಸರ್ವೆ ನಡೆಸಬೇಕು. ಸ್ಥಳೀಯರ ಅಭಿಪ್ರಾಯಗಳನ್ನು ಪಡೆದುಕೊಳ್ಳಲು ಸಮಯ ಬೇಕಿದೆ. ಹೀಗಾಗಿ ನಮಗೆ ಕಾಲಾವಕಾಶ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದರು.
ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆಯ ಜತೆಗೆ ಅಲ್ಲಿನ ಜನರ ಬದುಕು, ಕೃಷಿ ಹಾಗೂ ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿಯೇ ಮುಂದಿನ ಕ್ರಮ ಕೈಗೊಳ್ಳಬೇಕು ಎಂಬುದು ರಾಜ್ಯ ಸರ್ಕಾರದ ನಿಲುವಾಗಿದೆ.



















