ಗದಗ: ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಕೇಂದ್ರ ತನಿಖಾ ದಳ (ಸಿಬಿಐ) ಸೇರಿದಂತೆ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ದಮನಿಸಲು ಹಾಗೂ ಬೆದರಿಸಲು ಪ್ರಯತ್ನಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಆರೋಪಿಸಿದರು.
ಗದುಗಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಮೋದಿ ಸರಕಾರ ಅಧಿಕಾರಕ್ಕೆ ಬಂದ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಇಡಿ, ಸಿಬಿಐ ಸೇರಿದಂತೆ ತನಿಖಾ ಸಂಸ್ಥೆಗಳು ನಡೆಸಿರುವ ವಿವಿಧ ದಾಳಿಗಳು, ತನಿಖೆಗಳು ಹಾಗೂ ಪ್ರಕರಣಗಳನ್ನು ಗಮನಿಸಿದರೆ, ಅವುಗಳ ಗುರಿ ಬಹುತೇಕ ವಿರೋಧ ಪಕ್ಷಗಳ ನಾಯಕರೇ ಆಗಿದ್ದಾರೆಂದು ದೂರಿದರು.
ಕೇಂದ್ರ ಸರಕಾರದ ವಿರುದ್ಧ ಧ್ವನಿ ಎತ್ತುವ ನಾಯಕರಿಗೆ ತನಿಖಾ ಸಂಸ್ಥೆಗಳ ಮೂಲಕ ಎಚ್ಚರಿಕೆ ನೀಡುವ ಪ್ರಯತ್ನ ನಡೆಯುತ್ತಿದೆ. ರಾಜಕೀಯ ವಿರೋಧ ರಾಜಕೀಯವಾಗಿಯೇ ಎದುರಿಸಬೇಕು. ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸುವುದು ಸರಿಯಲ್ಲ. ವಿರೋಧ ಪಕ್ಷಗಳು ಸರಕಾರದ ನೀತಿ, ಆಡಳಿತ ಹಾಗೂ ನಿರ್ಧಾರ ಪ್ರಶ್ನಿಸುವುದು ಪ್ರಜಾಪ್ರಭುತ್ವದ ಸಹಜ ಪ್ರಕ್ರಿಯೆ. ಆದರೆ ಪ್ರಶ್ನಿಸುವ ನಾಯಕರ ವಿರುದ್ಧ ತನಿಖಾ ಸಂಸ್ಥೆಗಳ ದಾಳಿ ನಡೆಸಿ ಒತ್ತಡ ಹೇರುವ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ವಿಷಾದಿಸಿದರು.
ಇಡಿ ಮತ್ತು ಸಿಬಿಐನಂತಹ ಸಂಸ್ಥೆಗಳು ಕಾನೂನು ಬದ್ಧವಾಗಿ, ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಿದೆ. ಯಾವುದೇ ವ್ಯಕ್ತಿ ಅಥವಾ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳುವಾಗ ರಾಜಕೀಯ ಹಸ್ತಕ್ಷೇಪದ ಆರೋಪಗಳಿಗೆ ಅವಕಾಶವಾಗದಂತೆ ಪಾರದರ್ಶಕತೆ ಕಾಪಾಡಬೇಕು ಎಂದು ಒತ್ತಾಯಿಸಿದರು.
ಕೇಂದ್ರದ ತನಿಖಾ ಸಂಸ್ಥೆಗಳ ಕಾರ್ಯವೈಖರಿ ಕುರಿತು ವಿರೋಧ ಪಕ್ಷಗಳು ನಿರಂತರ ಪ್ರಶ್ನೆಗಳನ್ನು ಎತ್ತುತ್ತಿವೆ. ಈ ಹಿನ್ನೆಲೆಯಲ್ಲಿ ಸಂಸ್ಥೆಗಳ ಸ್ವಾಯತ್ತತೆ ಮತ್ತು ಅವುಗಳ ಕಾರ್ಯವಿಧಾನದ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿದೆ ಎಂದರು.




















