ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ ಒಟ್ಟು ₹5,500 ದರ ನಿಗದಿಪಡಿಸುವಂತೆ ಆಗ್ರಹಿಸಿರುವ ರೈತರು, ಸರ್ಕಾರಕ್ಕೆ ನೀಡಿರುವ ಗಡುವು ಅಕ್ಟೋಬರ್ 30ರಂದು ಮುಕ್ತಾಯಗೊಳ್ಳಲಿದೆ. ಅಂದು ಮಧ್ಯಾಹ್ನ 3 ಗಂಟೆಯೊಳಗೆ ಮುಖ್ಯಮಂತ್ರಿ ಖುದ್ದಾಗಿ ಗುರ್ಲಾಪುರಕ್ಕೆ ಆಗಮಿಸಿ ದರ ಘೋಷಿಸಬೇಕು. ಇಲ್ಲದಿದ್ದರೆ ಅಕ್ಟೋಬರ್ 31ರಂದು ಹತ್ತರಗಿ ಟೋಲ್ ನಾಕಾ ಬಂದ್ ಮಾಡಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ರೈತ ನಾಯಕ ಚೂನಪ್ಪ ಪೂಜೇರಿ ಎಚ್ಚರಿಕೆ ನೀಡಿದ್ದಾರೆ.
ಗುರ್ಲಾಪುರದಲ್ಲಿ ನಡೆಯುತ್ತಿರುವ ರೈತರ ಹೋರಾಟದ ಕುರಿತು ಮಾತನಾಡಿದ ಅವರು, ಕಬ್ಬಿಗೆ ರಾಜ್ಯ ಸರ್ಕಾರದಿಂದ ಪ್ರತಿ ಟನ್‌ಗೆ ₹1,000 ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರಿಂದ ₹4,500 ಸೇರಿ ಒಟ್ಟು ₹5,500 ದರ ನೀಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಈ ಕುರಿತು ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿಗಳು ಕೇಳಿದ್ದ ಎರಡು ದಿನಗಳ ಗಡುವು ಅಕ್ಟೋಬರ್ 30ಕ್ಕೆ ಮುಕ್ತಾಯವಾಗಲಿದೆ ಎಂದರು.
ಅಕ್ಟೋಬರ್ 30ರ ಸಂಜೆವರೆಗೆ ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತೇವೆ. ಅಷ್ಟರೊಳಗೆ ಸರ್ಕಾರ ಕಬ್ಬಿನ ದರ ಘೋಷಿಸಬೇಕು. ಇಲ್ಲದಿದ್ದರೆ ಅಕ್ಟೋಬರ್ 31ರಂದು ಹತ್ತರಗಿ ಟೋಲ್ ನಾಕಾ ಬಂದ್ ಮಾಡಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.
ಶಶಿಕಾಂತ ಗುರೂಜಿ ಹಾಗೂ ಚುಕ್ಕಿ ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದ 31 ಜಿಲ್ಲೆಗಳಿಂದ ಲಕ್ಷಾಂತರ ರೈತರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಚೂನಪ್ಪ ಪೂಜೇರಿ ಎಚ್ಚರಿಸಿದರು.



















