ವಿಜಯನಗರ: ಸಾರ್ವಜನಿಕರು ತಮ್ಮ ಸಣ್ಣಪುಟ್ಟ ಕೆಲಸಗಳು ಹಾಗೂ ವಿವಿಧ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಪ್ರಜಾಸೇವಾ ಅಭಿಯಾನ’ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಚಾಲನೆ ನೀಡಿದರು.
ಸೆಪ್ಟೆಂಬರ್ 5ರಿಂದ ರಾಜ್ಯಾದ್ಯಂತ ಈ ಅಭಿಯಾನ ಆರಂಭವಾಗುತ್ತಿದ್ದು, ಪ್ರತಿ ಶನಿವಾರ ತಾಲೂಕು ಅಥವಾ ಹೋಬಳಿ ಮಟ್ಟದಲ್ಲಿ ಜನರ ಅಹವಾಲು ಸ್ವೀಕರಿಸುವ ವ್ಯವಸ್ಥೆ ಜಾರಿಯಾಗಲಿದೆ. ‘ಪ್ರಜಾಸೇವಾ’ ಯೋಜನೆಯ ಪ್ರಮುಖ ಉದ್ದೇಶ ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅಥವಾ ನಿಗದಿತ ಕಾಲಮಿತಿಯೊಳಗೆ ಪರಿಹರಿಸುವುದು. ಪಿಂಚಣಿ, ಪಹಣಿ, ಪಡಿತರ ಚೀಟಿ, ಕಂದಾಯ, ವಿದ್ಯುತ್, ಕುಡಿಯುವ ನೀರು, ಚರಂಡಿ ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳಿಗೆ ಸಂಬಂಧಿಸಿದ ಅರ್ಜಿಗಳು ಮತ್ತು ದೂರುಗಳನ್ನು ಸಾರ್ವಜನಿಕರು ಸಲ್ಲಿಸಬಹುದಾಗಿದೆ.
ಕೂಡ್ಲಿಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಸರ್ಕಾರವೇ ಜನರ ಮನೆಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು. ಎಲ್ಲ ಸಮಸ್ಯೆಗಳನ್ನು ಒಂದೇ ದಿನದಲ್ಲಿ ಪರಿಹರಿಸಲು ಸಾಧ್ಯವಾಗದಿದ್ದರೂ, ಜನರ ಭಾವನೆಗಳನ್ನು ನೇರವಾಗಿ ಅರಿತು ಸೂಕ್ತ ಪರಿಹಾರ ಕಂಡುಕೊಳ್ಳಲು ಈ ವ್ಯವಸ್ಥೆ ನೆರವಾಗಲಿದೆ ಎಂದು ಹೇಳಿದರು.
ಪ್ರತಿ ಶನಿವಾರ ‘ಪ್ರಜಾಸೇವಾ’ ಸಭೆ : ಸರ್ಕಾರದ ರೂಪುರೇಷೆಯಂತೆ ಪ್ರತಿ ಶನಿವಾರ ತಾಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಅಭಿಯಾನ ಸಭೆಗಳು ಪರ್ಯಾಯವಾಗಿ ನಡೆಯಲಿವೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲೂಕು ಕೇಂದ್ರದಲ್ಲಿ ಸಭೆ ನಡೆಯಲಿದ್ದು, ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು/ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.
ಸಭೆಯ ದಿನಾಂಕ, ಸಮಯ, ಸ್ಥಳ ಹಾಗೂ ಅಧ್ಯಕ್ಷತೆ ವಹಿಸುವ ಜನಪ್ರತಿನಿಧಿಗಳ ಕುರಿತು ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಇದಕ್ಕಾಗಿ AI ಆಧಾರಿತ ಕಾಲ್ ಸೆಂಟರ್ ಮೂಲಕ ನಾಗರಿಕರಿಗೆ ಕರೆ ಮಾಡಿ ಮಾಹಿತಿ ನೀಡುವ ವ್ಯವಸ್ಥೆಯನ್ನೂ ರೂಪಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ? : ಪ್ರಜಾಸೇವಾ ಸಭೆಗೆ ಮುನ್ನ ಸಾರ್ವಜನಿಕರಿಗೆ ಅರ್ಜಿ ನಮೂನೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಅಥವಾ ಸಭೆಯ ದಿನ ನೇರವಾಗಿ ಸಲ್ಲಿಸಬಹುದು.
ಅಲ್ಲದೆ, ಸಾರ್ವಜನಿಕರು ಗ್ರಾಮ ಒನ್ ಕೇಂದ್ರಗಳ ಮೂಲಕ ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು. ಸಭೆ ನಡೆಯುವ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆಗಳನ್ನು ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಹಾಗೂ ಇಂಟರ್‌ನೆಟ್ ಸೌಲಭ್ಯಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಮತ್ತು ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ.
1902ಕ್ಕೆ ಕರೆ ಮಾಡಿ ದೂರು ಸಲ್ಲಿಸಿ : ಸಾರ್ವಜನಿಕರು ಕಚೇರಿಗಳಿಗೆ ತೆರಳದೆ 1902 ಸಹಾಯವಾಣಿ ಮೂಲಕವೂ ತಮ್ಮ ಕುಂದುಕೊರತೆಗಳನ್ನು ದಾಖಲಿಸಬಹುದು. ಇದಲ್ಲದೆ, ಕರ್ನಾಟಕ ಸರ್ಕಾರದ Integrated Public Grievance Redressal System (IPGRS) ಪೋರ್ಟಲ್ ಹಾಗೂ ಜನಸ್ಪಂದನ ಮೊಬೈಲ್ ಆ್ಯಪ್ ಮೂಲಕವೂ ದೂರು ಸಲ್ಲಿಸುವ ವ್ಯವಸ್ಥೆ ಇದೆ.
ಅರ್ಜಿಗಳು ಮತ್ತು ದೂರುಗಳ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಲು ಅವಕಾಶವಿದ್ದು, ಅರ್ಜಿಗಳ ಪ್ರಗತಿಯನ್ನು ನೈಜ ಸಮಯದಲ್ಲಿ ಟ್ರ್ಯಾಕ್ ಮಾಡುವ ವ್ಯವಸ್ಥೆ ರೂಪಿಸಲಾಗಿದೆ.
ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ : ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಲಾದ ಅರ್ಜಿಗಳು ಮತ್ತು ಅಹವಾಲುಗಳ ವಿಲೇವಾರಿ ಮೇಲ್ವಿಚಾರಣೆಗೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನಾ ವ್ಯವಸ್ಥೆ ಜಾರಿಯಾಗಲಿದೆ. ತಾಲೂಕು ಮಟ್ಟದಿಂದ ಆರಂಭಿಸಿ ಉಪವಿಭಾಗ ಹಾಗೂ ಜಿಲ್ಲಾ ಮಟ್ಟದಲ್ಲಿ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಹಂತಕ್ಕೆ ಕಳುಹಿಸಲಾಗುತ್ತದೆ.
ನಿಗದಿತ ಹಂತದಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಅರ್ಜಿಯನ್ನು ಮೇಲಾಧಿಕಾರಿಗಳ ಗಮನಕ್ಕೆ ಕೊಂಡೊಯ್ಯುವ ವ್ಯವಸ್ಥೆಯೂ ಇರಲಿದೆ. ಇದರಿಂದ ಅಧಿಕಾರಿಗಳ ಹೊಣೆಗಾರಿಕೆ ಹೆಚ್ಚಿಸುವುದು ಹಾಗೂ ದೂರುಗಳ ವಿಲೇವಾರಿಯಲ್ಲಿ ವಿಳಂಬವನ್ನು ಕಡಿಮೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.
ಒಟ್ಟಿನಲ್ಲಿ, ‘ಪ್ರಜಾಸೇವಾ ಅಭಿಯಾನ’ದ ಮೂಲಕ ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವುದು, ಸರ್ಕಾರಿ ಕಚೇರಿಗಳ ಅಲೆದಾಟ ಕಡಿಮೆ ಮಾಡುವುದು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಕೂಡ್ಲಿಗಿಯಿಂದ ಆರಂಭವಾಗಿರುವ ಈ ವ್ಯವಸ್ಥೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ನಿಯಮಿತವಾಗಿ ನಡೆಯಲಿದೆ.
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.





















