SK Home Ad
Home ಸುದ್ದಿ ರಾಜ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಉಮರ್ ಫಾರೂಕ್ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಉಮರ್ ಫಾರೂಕ್ ಬಂಧನ

0
70

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಉಮರ್ ಫಾರೂಕ್ ಅನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.

2022ರ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಈ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೂ ಕಾರಣವಾಗಿತ್ತು.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಲಾಗಿತ್ತು. ತನಿಖೆ ವೇಳೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಕೆಲವು ಸಕ್ರಿಯ ಕಾರ್ಯಕರ್ತರು ಹಾಗೂ ಅದರ ಅಂಗಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳು ಹತ್ಯೆಯ ಸಂಚು ರೂಪಿಸಿ ಕೃತ್ಯ ಎಸಗಿರುವುದು ಬಹಿರಂಗವಾಗಿದೆ ಎಂದು ಎನ್‌ಐಎ ತನ್ನ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿತ್ತು.

ಈಗ ಬಂಧನಕ್ಕೊಳಗಾಗಿರುವ ಉಮರ್ ಫಾರೂಕ್ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯಾಗಿದ್ದು, ಆತನ ಸುಳಿವಿಗಾಗಿ ಎನ್‌ಐಎ ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿತ್ತು. ಇತ್ತೀಚೆಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಎನ್‌ಐಎ ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಕಾರ್ಯಾಚರಣೆ ನಡೆಸಿ ಉಮರ್ ಫಾರೂಕ್‌ನನ್ನು ವಶಕ್ಕೆ ಪಡೆದಿದ್ದಾರೆ.

ಬಂಧನದ ಬಳಿಕ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣದ ಸಂಚು, ತಲೆಮರೆಸಿಕೊಳ್ಳಲು ನೆರವಾದ ಜಾಲ ಹಾಗೂ ಇತರ ಆರೋಪಿಗಳ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯುವ ನಿರೀಕ್ಷೆಯಿದೆ. ಅಲ್ಲದೇ ಉಮರ್ ಫಾರೂಕ್ ಬಂಧನದಿಂದ ತನಿಖೆಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.