“ಅಂದು ಒಣಗಿಸಿ, ಇಂದು ಮುಳುಗಿಸಿ ಸಾಯಿಸುತ್ತಿದ್ದೀರಾ?” – ನೆರೆ ಪರಿಸ್ಥಿತಿ ಕುರಿತು ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಬೆಂಗಳೂರು :ರಾಜ್ಯದ ವಿವಿಧ ಭಾಗಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಉಲ್ಲೇಖಿಸಿ ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣವಾದದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, “ಕನ್ನಡಿಗರ ಪಾಲಿಗೆ ಈ ಸರ್ಕಾರವೇ ಒಂದು ದೊಡ್ಡ ಪ್ರಕೃತಿ ವಿಕೋಪ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಹಲವು ನದಿಗಳಾದ ಕೃಷ್ಣಾ, ಮಲಪ್ರಭಾ, ತುಂಗಾ, ಭದ್ರಾ ಮತ್ತು ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ.
ತಮ್ಮ ಪೋಸ್ಟ್‌ನಲ್ಲಿ ಸರ್ಕಾರದ ವಿರುದ್ಧ ಹಲವು ಪ್ರಶ್ನೆಗಳನ್ನು ಎತ್ತಿರುವ ಆರ್. ಅಶೋಕ್, ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಮಾಹಿತಿ ಇದ್ದರೂ, ಕೃಷ್ಣಾ ನದಿಯಲ್ಲಿ ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರ ಶಾಕ್
“ನೆರೆ ಬಂದರೂ ಸರ್ಕಾರ ನಿದ್ರೆಯಲ್ಲೇ” : ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ 20ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, ಅನೇಕ ಕುಟುಂಬಗಳು ನಿರಾಶ್ರಿತರಾಗಿವೆ. ಆದರೂ, ತಕ್ಷಣ ಗಂಜಿ ಕೇಂದ್ರಗಳನ್ನು ತೆರೆಯುವುದು, ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವುದು ಹಾಗೂ ತುರ್ತು ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ರೈತರ ಸಂಕಷ್ಟ ಪ್ರಸ್ತಾಪ : “ಅಂದು ಒಣಗಿದ ಬೆಳೆ, ಇಂದು ಮುಳುಗಿದೆ” ಎಂದು ಹೇಳಿರುವ ಆರ್. ಅಶೋಕ್, ಕಳೆದ ತಿಂಗಳು ಮಳೆ ಕೊರತೆಯಿಂದ ಸಂಕಷ್ಟಕ್ಕೀಡಾದ ರೈತರಿಗೆ ಬೆಳೆ ವಿಮೆ ತಲುಪಿಲ್ಲ. ಈಗ ಪ್ರವಾಹದಿಂದ ಬೆಳೆಗಳು ನಾಶವಾಗುತ್ತಿದ್ದರೂ ಹಾನಿ ಸಮೀಕ್ಷೆ ನಡೆಸಲು ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿಲ್ಲ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಕರ್ತವ್ಯನಿರತ ಪೇದೆ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ
ರಸ್ತೆ ಸುರಕ್ಷತೆ ಕುರಿತ ಪ್ರಶ್ನೆ : ಮಳೆ ಮತ್ತು ಗಾಳಿಯಿಂದ ರಸ್ತೆ ಬದಿಯ ಮರಗಳು ಉರುಳಿ ಸಾರ್ವಜನಿಕರು ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇತ್ತೀಚೆಗೆ ಕೊಣನೂರಿನಲ್ಲಿ ಮರ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಉಲ್ಲೇಖಿಸಿರುವ ಅವರು, ಮಳೆಗಾಲದ ಮುನ್ನ ದುರ್ಬಲ ಮರಗಳನ್ನು ತೆರವುಗೊಳಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿದ್ದಾರೆ.
“ಸಚಿವರು ಎಲ್ಲಿದ್ದಾರೆ?” : ಪ್ರವಾಹ ಪೀಡಿತ ಜಿಲ್ಲೆಗಳಿಗೆ ತೆರಳಿ ರಕ್ಷಣಾ ಕಾರ್ಯಗಳ ನೇತೃತ್ವ ವಹಿಸಬೇಕಾದ ಮುಖ್ಯಮಂತ್ರಿ ಮತ್ತು ಸಚಿವರು ಬೆಂಗಳೂರಿನಲ್ಲೇ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾಹೀರಾತಿಗೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುವ ಸರ್ಕಾರಕ್ಕೆ, ಪ್ರವಾಹ ಪೀಡಿತ ಜಿಲ್ಲೆಗಳಿಗೆ ತುರ್ತು ಪರಿಹಾರ ನಿಧಿ ಬಿಡುಗಡೆ ಮಾಡಲು ಹಣವಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: KBJNL ಇಇ ಬಸನಗೌಡ ಮನೆ ಸೇರಿ 7 ಕಡೆ ಲೋಕಾಯುಕ್ತರ ದಾಳಿ
ಕೊನೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರನ್ನು ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಳುಹಿಸಿ, ಯುದ್ಧೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಬೇಕು. ಇಲ್ಲವಾದರೆ ರಾಜ್ಯದ ಜನರ ಆಕ್ರೋಶ ಸರ್ಕಾರದ ವಿರುದ್ಧ ಹೆಚ್ಚಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.






















