Karnataka Weather: ಇನ್ನೂ ಒಂದು ವಾರ ಕರ್ನಾಟಕದಲ್ಲಿ ಮಳೆ

0
37

ಬೆಂಗಳೂರು: ಇನ್ನೂ ಒಂದು ವಾರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಹೌದು, ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಎಂಡಿಸಿ) ರಾಜ್ಯದ ಹವಾಮಾನದ ಮುನ್ಸೂಚನೆ ನೀಡಿದೆ.

ಮುಂದಿನ 7 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿದೆ. ಗುರುವಾರ ಅಲ್ಲಲ್ಲಿ ಅತಿ ಭಾರೀ ಮಳೆಯಾಗಲಿದೆ.

ಬೆಂಗಳೂರು ನಗರ ಸೇರಿ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮಳೆ ಮುಂದುವರೆದಿದೆ. ಬುಧವಾರ ಸಹ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿ, ಗಣೇಶ ಚತುರ್ಥಿ ಸಂಭ್ರಮಕ್ಕೆ ತಣ್ಣೀರು ಸುರಿದಿತ್ತು.

ಗುರುವಾರವೂ ವಿವಿಧ ಜಿಲ್ಲೆಗಳಲ್ಲಿಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಹಾಗೂ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ತಾಲೂಕುಗಳ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 27.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.32 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯ ತನಕ ಜಿಲ್ಲೆಯಲ್ಲಿ ಸುರಿದ ಮಳೆ 2471.59 ಮಿ.ಮೀ.

ಉಡುಪಿಯ ವರದಿ: ಜಿಲ್ಲಾ ದಂಡಾಧಿಕಾರಿಯವರ ಕಾರ್ಯಾಲಯ ಉಡುಪಿ ಜಿಲ್ಲೆ ಮಳೆಯ ಕುರಿತು ಮಾಹಿತಿಯನ್ನು ನೀಡಿದೆ. (ವಿಪತ್ತು ನಿರ್ವಹಣಾ-2005 ಕಾಯ್ದೆ ಕಲಂ 26, 30 ಮತ್ತು 34ರಡಿ) ಆದೇಶವನ್ನು ಹೊರಡಿಸಲಾಗಿದ್ದು, ಆದೇಶವು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 27.08.2025ರ ಹವಾಮಾನ ಇಲಾಖೆಯ ಆರೆಂಜ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 28.08.2025ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌ ಕಾಲೇಜುಗಳಿಗೆ ರಜೆ ಘೋಷಿಸಿರುವುದಿಲ್ಲ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

  • ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
  • ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.
  • ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
  • ದುರ್ಬಲ/ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
  • ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.

ವಿದ್ಯಾರ್ಥಿಗಳ ಪೋಷಕರು/ ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು ಎಂದು ಆದೇಶ ತಿಳಿಸಿದೆ.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ 1077 ಸಂಪರ್ಕಿಸಿ ಎಂದು ಮಾಹಿತಿ ನೀಡಲಾಗಿದೆ.

Previous articleAnchor Anushree: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ
Next articleಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ, ಪೈಪೋಟಿಯಲ್ಲಿ ಬಿಗ್ ಟ್ವಿಸ್ಟ್ – ಹಟ್ಟಿಹೊಳಿ ಕಣದಿಂದ ಹಿಂದಕ್ಕೆ

LEAVE A REPLY

Please enter your comment!
Please enter your name here