ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ಐವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಯಿತು. ಸಂಜೆ 6 ಗಂಟೆ ಸಮಯವಾಗಿದ್ದರಿಂದ ಕೋರಮಂಗಲದ ಎನ್‌ಜಿವಿಯಲ್ಲಿರುವ ಜಡ್ಜ್ ಮನೆಗೆ ಆರೋಪಿಗಳನ್ನು ಕರೆದೊಯ್ಯಲಾಯಿತು.
ಅನ್ನಪೂರ್ಣೇಶ್ವರಿ ನಗರ ಪೊಲೀಸರು ಎ1 ಪವಿತ್ರಾ ಗೌಡ, ಎ2 ದರ್ಶನ, ಎ5 ನಾಗರಾಜ್, ಎ6 ಲಕ್ಷ್ಮಣ ಮತ್ತು ಎ14 ಪ್ರದೂಷ್ ಸೇರಿ ಐವರು ಆರೋಪಿಗಳನ್ನು ಬೆಂಗಳೂರಿನ ಸಿಸಿಎಚ್ 64ರ ನ್ಯಾಯಾಧೀಶರಾದ ಈರಪ್ಪಣ್ಣ ಪವಡಿ ನಾಯ್ಕ್ ಎದುರು ಹಾಜರುಪಡಿಸಿದ್ದಾರೆ. ಐವರಿಗೂ ಆರೋಪಿಗಳಿಗೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ದರ್ಶನ್ ಬಂಧನವಾಗುತ್ತಿದ್ದಂತೆ ಅವರ ಅಭಿಮಾನಿಗಳು ಪೊಲೀಸ್ ಠಾಣೆಯ ಸುತ್ತಲೂ ಜಮಾಗೊಂಡಿದ್ದರು. ಅಲ್ಲದೇ ದರ್ಶನ್‌ನನ್ನು ನೋಡಲು ಅವರ ಅಭಿಮಾನಿಗಳು ನ್ಯಾಯಾಧೀಶರ ಮನೆ ಹೊರಗಡೆಯೂ ನಿಂತಿದ್ದು, ನ್ಯಾಯಾಧೀಶ ಈರಪ್ಪಣ್ಣ ಪವಡಿ ನಾಯ್ಕ್ ಅವರ ನಿವಾಸದ ಸುತ್ತಲೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ನ್ಯಾಯಾಧೀಶರ ಆದೇಶದಂತೆ ಎಲ್ಲ ಐವರು ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನ್ಯಾಯಾಧೀಶರ ಮನೆಯಿಂದ ಆರೋಪಿಗಳನ್ನು ಪೊಲೀಸ್ ವ್ಯಾನ್‌ನಲ್ಲಿ ಜೈಲಿಗೆ ಕರೆದೊಯ್ಯಲಾಯಿತು.
ನಟ ದರ್ಶನ್ ಮೊದಲು ಬಂಧಿತರಾದಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಬಳಿಕ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದು ಕೋರ್ಟ್ ಆದೇಶದಂತೆ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಕಳಿಸಲಾಗಿತ್ತು. ದರ್ಶನ್ ಬಳ್ಳಾರಿ ಜೈಲು ಪಾಲಾಗಿದ್ದರು. ಇನ್ನು ದರ್ಶನ್ ಜಾಮೀನು ಬೇಕಿದ್ದರೂ ಕೂಡ ಸುಪ್ರೀಂ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಬೇಕಾಗಿದೆ.
ಕೋರ್ಟ್ ಹೇಳಿದ್ದೇನು?: ಇದೊಂದು ಮಹತ್ವದ ತೀರ್ಪು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿಯೇ ಹೇಳಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ6 ಜಗದೀಶ್, ಎ7 ಅನು ಕುಮಾರ್, ಎ14 ಪ್ರದೋಶ್, ಎ11 ನಾಗರಾಜು ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದುಗೊಂಡಿದೆ.
ಸರ್ಕಾರ ತನ್ನ ಮೇಲ್ಮನವಿಯಲ್ಲಿ ದರ್ಶನ್‌ಗೆ ಈ ಹಿಂದೆ ಕೂಡ ಅಪರಾಧ ಹಿನ್ನೆಲೆ ಇದೆ. ಬೆನ್ನು ನೋವು ಎಂದು ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದಿದ್ದಾರೆ. ಆದರೆ ಮರು ದಿನ ಚಿತ್ರ ಪ್ರದರ್ಶನದಲ್ಲಿ ಭಾಗಿಯಾಗಿದ್ದಾರೆ ಎಂದು ಸರ್ಕಾರ ವಾದಿಸಿತ್ತು.
ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದು ಸರಿ ಇಲ್ಲ. ದಾಖಲೆಗಳಿಗೆ ವಿರುದ್ಧವಾಗಿ ತೀರ್ಪು ನೀಡಲಾಗಿದೆ. ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಎಂದು ತೀರ್ಪಿನಲ್ಲಿ ಹೇಳಿದೆ.
ಆದರೆ, ಮೃತಪಟ್ಟ ವ್ಯಕ್ತಿಯ ಮೈ ಮೇಲಿನ ಗಾಯಗಳು ಇದನ್ನು ಸುಳ್ಳು ಎಂದು ಹೇಳುತ್ತಿವೆ. ಸಾಕ್ಷಿಗಳ ಹೇಳಿಕೆಯನ್ನು ತಡವಾಗಿ ದಾಖಲಿಸಲಾಗಿದೆ ಎಂದು ಅನುಮಾನಿಸಲಾಗಿದೆ ಎಂದು ಹೇಳಿರುವ ಕೋರ್ಟ್, ಸಾಕ್ಷಿಗಳ ವಿಚಾರಣೆಯನ್ನು ನಡೆಸಿ, ಪ್ರಕರಣದ ವಿಚಾರಣೆ ನಡೆಸಿ ಎಂದು ನಿರ್ದೇಶನ ನೀಡಿದೆ.