SK Home Ad
Home ಸುದ್ದಿ ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವಶ

ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವಶ

0
77

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ರಾಮಚಂದ್ರೇಗೌಡ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ರಾಮಚಂದ್ರೇಗೌಡ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿ ನಾಯಕರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ನಾಯಕರಲ್ಲಿ ರಾಮಚಂದ್ರೇಗೌಡ ಪ್ರಮುಖರಾಗಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಪಕ್ಷದ ಸಂಘಟನೆ ಬಲಪಡಿಸಲು ಅವರು ಅವಿರತವಾಗಿ ದುಡಿದಿದ್ದರು. ಪಕ್ಷದ ಆರಂಭಿಕ ದಿನಗಳಿಂದಲೇ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಕಾರ್ಯಕರ್ತರ ನಡುವೆ ಸರಳತೆ ಮತ್ತು ಸಂಘಟನಾ ಕೌಶಲ್ಯದಿಂದ ವಿಶಿಷ್ಟ ಸ್ಥಾನವನ್ನು ಗಳಿಸಿದ್ದರು.

ಪಕ್ಕಾ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಿನ್ನೆಲೆ ಹೊಂದಿದ್ದ ರಾಮಚಂದ್ರೇಗೌಡರು 1953ರಲ್ಲಿ ಸಂಘವನ್ನು ಸೇರಿ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟರು. ಬಳಿಕ 1970ರಲ್ಲಿ ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿ ಜನಸೇವೆಗಾಗಿ ತಮ್ಮನ್ನು ಸಮರ್ಪಿಸಿಕೊಂಡರು.

ರಾಜ್ಯ ರಾಜಕಾರಣದಲ್ಲಿ ಮೇಲ್ಮನೆಯ ಅತ್ಯಂತ ಪ್ರಭಾವಿ ನಾಯಕರಾಗಿದ್ದ ಅವರು ಸತತವಾಗಿ ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ವಿಶಿಷ್ಟ ದಾಖಲೆ ನಿರ್ಮಿಸಿದ್ದರು. ಆಡಳಿತಾತ್ಮಕ ಅನುಭವ ಮತ್ತು ರಾಜಕೀಯ ಪಕ್ವತೆಯಿಂದ ಅವರು ರಾಜ್ಯ ರಾಜಕೀಯದಲ್ಲಿ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು.

ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ ಅವರು, ವೈದ್ಯಕೀಯ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದರು.

2010ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಹಗರಣದಲ್ಲಿ ಅವರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಸುದೀರ್ಘ ಕಾನೂನು ಹೋರಾಟ ನಡೆಸಿದ ಅವರು, ಹೈಕೋರ್ಟ್‌ನಿಂದ ಸಂಪೂರ್ಣ ದೋಷಮುಕ್ತರಾಗಿ ಕ್ಲೀನ್ ಚಿಟ್ ಪಡೆದಿದ್ದರು.

ಸರಳತೆ, ಪ್ರಾಮಾಣಿಕತೆ ಮತ್ತು ಸಂಘಟನಾ ಸಾಮರ್ಥ್ಯದಿಂದ ಪಕ್ಷದ ಕಾರ್ಯಕರ್ತರ ಮನ ಗೆದ್ದಿದ್ದ ರಾಮಚಂದ್ರೇಗೌಡರ ನಿಧನವು ಕರ್ನಾಟಕ ರಾಜಕೀಯಕ್ಕೆ ಅಪೂರಣೀಯ ನಷ್ಟವಾಗಿದೆ. ಅವರ ಅಗಲಿಕೆಯಿಂದ ಬಿಜೆಪಿ ಪಕ್ಷ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ.