SK Home Ad
Home ಸುದ್ದಿ ರಾಜ್ಯ ರಾಜ್ಯಪಾಲರಿಂದ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ

ರಾಜ್ಯಪಾಲರಿಂದ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ

0
236

ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಆರಂಭ; ಸಿಎಂ ಸ್ಥಾನಕ್ಕೆ DKಶಿವಕುಮಾರ್‌ ಹೆಸರು ಬಹುತೇಕ ಖಚಿತ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರ ಸಲ್ಲಿಸಲಾದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಅಂಗೀಕರಿಸಿದ್ದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಗೆ ಅಧಿಕೃತ ಮುದ್ರೆ ಬಿದ್ದಂತಾಗಿದೆ.

ರಾಜ್ಯಪಾಲರ ಅನುಪಸ್ಥಿತಿಯಲ್ಲಿ ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ಅವರು ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದರು. ನಂತರ ರಾಜ್ಯಪಾಲರು ಹೊರಡಿಸಿದ ಅಧಿಸೂಚನೆಯಲ್ಲಿ, “ಭಾರತದ ಸಂವಿಧಾನದ 164(1)ನೇ ವಿಧಿಯ ಅಡಿಯಲ್ಲಿ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸುತ್ತೇನೆ. ಅವರ ನೇತೃತ್ವದ ಸಚಿವ ಸಂಪುಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ” ಎಂದು ಉಲ್ಲೇಖಿಸಲಾಗಿದೆ.

ಇದರ ಜೊತೆಗೆ ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸುವವರೆಗೂ ಸಿದ್ದರಾಮಯ್ಯ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸಹ ರಾಜ್ಯಪಾಲರ ಕಚೇರಿ ಸ್ಪಷ್ಟಪಡಿಸಿದೆ.

ಇದೀಗ ರಾಜ್ಯ ರಾಜಕೀಯದ ಸಂಪೂರ್ಣ ಗಮನ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರತ್ತ ಕೇಂದ್ರೀಕೃತವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಅವರು ಮುಂದಿನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಈಗಾಗಲೇ ದೆಹಲಿಗೆ ತೆರಳಿದ್ದು, ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವದೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ರಾಜ್ಯಸಭಾ ಅಭ್ಯರ್ಥಿಗಳ ಆಯ್ಕೆ, ಹೊಸ ಸಚಿವ ಸಂಪುಟದ ರಚನೆ, ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನದ ಲೆಕ್ಕಾಚಾರ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಭೆಯಲ್ಲಿ ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೇವಾಲಾ ಕೂಡ ಭಾಗಿಯಾಗಲಿದ್ದಾರೆ.

ಇನ್ನೊಂದೆಡೆ, ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದಲ್ಲಿ ಪ್ರಸ್ತುತ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರಿಗೆ ಅವಕಾಶ ಸಿಗದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೊಸ ಮುಖಗಳಿಗೆ ಅವಕಾಶ ನೀಡುವ ಜೊತೆಗೆ, ಜಾತಿ, ಪ್ರದೇಶ ಹಾಗೂ ರಾಜಕೀಯ ಸಮತೋಲನವನ್ನು ಕಾಪಾಡಲು ಕಾಂಗ್ರೆಸ್ ನಾಯಕತ್ವ ತಂತ್ರ ರೂಪಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜಕೀಯ ವಲಯದಲ್ಲಿ ಮೂರು ಅಥವಾ ನಾಲ್ಕು ಉಪಮುಖ್ಯಮಂತ್ರಿಗಳನ್ನು ನೇಮಿಸುವ ಸಾಧ್ಯತೆಯ ಕುರಿತೂ ಚರ್ಚೆಗಳು ಜೋರಾಗಿವೆ. ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ, ಕರಾವಳಿ ಮತ್ತು ಒಕ್ಕಲಿಗ-ದಲಿತ ಸಮುದಾಯಗಳಿಗೆ ಸಮಾನ ಪ್ರತಿನಿಧಿತ್ವ ನೀಡುವ ನಿಟ್ಟಿನಲ್ಲಿ ಹೈಕಮಾಂಡ್ ಸಮೀಕರಣ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯ ಅವರ ರಾಜೀನಾಮೆಯೊಂದಿಗೆ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ರಾಜಕೀಯ ಅಧ್ಯಾಯ ಆರಂಭವಾಗುತ್ತಿದ್ದು, ಮುಂದಿನ ಕೆಲ ದಿನಗಳು ಕರ್ನಾಟಕ ರಾಜಕೀಯದ ದಿಕ್ಕನ್ನು ನಿರ್ಧರಿಸಲಿವೆ.