ಜಾತಿಗಣತಿ: ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಯಂ ಇಚ್ಛೆ

0
100

ಜಾತಿಗಣತಿ ಕುರಿತು ಕರ್ನಾಟಕದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸೆಪ್ಟೆಂಬರ್ 22ರಿಂದ ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸುತ್ತಿದೆ.

ಈ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ/ ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ. ಸಮೀಕ್ಷೆಯಲ್ಲಿ ಮಾಹಿತಿಯನ್ನು ನೀಡುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲ ಎಂದು ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್ ಸ್ಪಷ್ಟಪಡಿಸಿದ್ದಾರೆ.

2025ರ ಸೆಪ್ಟೆಂಬರ್ 26ರ ಪತ್ರಿಕೆಗಳಲ್ಲಿ ಪ್ರಕಟಿಸಿರುವ ಹೇಳಿಕೆಯನ್ನು ಮತ್ತೊಮ್ಮೆ ಅವರು ಪುನರುಚ್ಛರಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 2025ನೇ ಸೆಪ್ಟೆಂಬರ್ 22 ರಿಂದ ಪ್ರಾರಂಭಿಸಿದ್ದು ಪ್ರಗತಿಯಲ್ಲಿದೆ.

ಈ ಸಮೀಕ್ಷೆಯಲ್ಲಿ ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದ್ದರೂ, ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ/ ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆಯೆಂದೂ ಹಾಗೂ ಮಾಹಿತಿಯನ್ನು ನೀಡುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲ ಎಂದು ಮಧುಸೂದನ್ ಆರ್.ನಾಯ್ಕ್ ತಿಳಿಸಿದ್ದಾರೆ.

2025ನೇ ಸೆಪ್ಟೆಂಬರ್ 28ರಂದು ಕೆಲವು ಜನಪ್ರತಿನಿಧಿಗಳು, ಮಾನ್ಯ ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸುತ್ತಾ, ತಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲವೆಂದು ಹಾಗೂ ಸಾರ್ವಜನಿಕರೂ ಸಹ ಭಾಗವಹಿಸಬಾರದೆಂದು ಹೇಳಿಕೆಗಳನ್ನು ನೀಡಿರುವುದು ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ರೀತಿಯ ಹೇಳಿಕೆಗಳ ಮೂಲಕ ಸಾರ್ವಜನಿಕರು ಸಮೀಕ್ಷೆಯಲ್ಲಿ ಭಾಗವಹಿಸದಂತೆ ಪ್ರೇರೇಪಿಸಲಾಗುತ್ತಿದೆ. ಆದರೆ ವಾಸ್ತವವಾಗಿ ಈ ರೀತಿಯ ಹೇಳಿಕೆಗಳು ಮಾನ್ಯ ನ್ಯಾಯಾಲಯದ ಆದೇಶದ ಆಶಯಗಳಿಗೆ ವಿರುದ್ಧವಾಗಿವೆ. ರಾಜ್ಯದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶದಿಂದ ಮತ್ತು ಅವರ ಕಲ್ಯಾಣ ಹಾಗೂ ಏಳಿಗೆಗಾಗಿ ಯೋಜನೆಗಳನ್ನು ರೂಪಿಸಿ, ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲು, ಶಾಸನಬದ್ಧ ನಿಯಮಾವಳಿಗಳನ್ನಯ ಸದರಿ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ.

ಆದರೆ, ಸಾರ್ವಜನಿಕ ಹೇಳಿಕೆಗಳು ಸಮೀಕ್ಷೆಯಲ್ಲಿ ಜನರು ಭಾಗವಹಿಸದಂತೆ ಪ್ರಚೋದಿಸುತ್ತಿದ್ದು, ಸಾರ್ವಜನಿಕ ಹಿತಕ್ಕಾಗಿ ಕೈಗೊಳ್ಳಲಾದ ಸಮೀಕ್ಷೆಯ ಉದ್ದೇಶಕ್ಕೆ ವಿರುದ್ಧವಾಗಿವೆ. ನಾಗರಿಕರು ಯಾವುದೇ ಬಲವಂತವಿಲ್ಲದೆ ಸ್ವಇಚ್ಛೆಯಿಂದ ಸಮೀಕ್ಷೆಯಲ್ಲಿ ಭಾಗವಹಿಸುತ್ತಿರುವ ಸಂದರ್ಭದಲ್ಲಿ, ಅವರ ಭಾಗವಹಿಸುವಿಕೆಯನ್ನು ತಡೆಯುವ ಇಂತಹ ಹೇಳಿಕೆಗಳು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿರುತ್ತದೆ.

ಈ ರೀತಿಯ ಹೇಳಿಕೆಗಳಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ತಲುಪುವ ಸಾಧ್ಯತೆ ಇರುವ ಕಾರಣ ಹಾಗೂ ಇದು ಮಾನ್ಯ ನ್ಯಾಯಾಲಯದ ಆದೇಶದ ಆಶಯಕ್ಕೆ ವ್ಯತಿರಿಕ್ತವಾಗಿರುವುದರಿಂದ (Against the spirit) ಈ ರೀತಿಯ ಹೇಳಿಕೆಗಳನ್ನು ನೀಡದಿರುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂದನ್ ಆರ್.ನಾಯ್ಕ್ ತಿಳಿಸಿದ್ದಾರೆ.

Previous articleಕಲಬುರಗಿಯಲ್ಲಿ ಸಿಎಂ ವೈಮಾನಿಕ ಸಮೀಕ್ಷೆ
Next articleಸಂಪಾದಕೀಯ: ಮಹಾರಾಷ್ಟ್ರದ ಅತಿಯಾಸೆ ಕರ್ನಾಟಕಕ್ಕೆ ಗತಿಗೇಡು

LEAVE A REPLY

Please enter your comment!
Please enter your name here