ಹೊಸಪೇಟೆ: ನಕಲಿ ವೈದ್ಯರ ಹಾವಳಿ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಕಾನೂನು ಬದಲಾವಣೆ ಹಾಗೂ ಕಠಿಣ ಶಿಕ್ಷೆಯ ಕುರಿತೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದರು.
ಹೊಸಪೇಟೆ ಹೊರವಲಯದ ಜಂಬುನಾಥ ಹಳ್ಳಿ ವ್ಯಾಪ್ತಿಯಲ್ಲಿ ನೂತನ 250 ಹಾಸಿಗೆ ಸಾಮರ್ಥ್ಯದ ಜಿಲ್ಲಾಸ್ಪತ್ರೆ ಕಟ್ಟಡ ಉದ್ಘಾಟಿಸಿ ಸಚಿವರು ಮಾತನಾಡಿ, ಈ ಶೈಕ್ಷಣಿಕ ವರ್ಷದಲ್ಲಿ ಹೊಸ ಶಾಲೆಗಳು, ಹಾಸ್ಟೇಲ್‌ಗಳು ಹಾಗೂ ವೃತ್ತಿಪರ ಕಾಲೇಜುಗಳ ಆರಂಭಕ್ಕೆ ಮಂಜೂರಾತಿ ನೀಡಲಾಗಿದೆ ಎಂದರು.
104 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಜಿಲ್ಲಾ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ನೇಮಕಾತಿ ಸೇರಿದಂತೆ ಎಲ್ಲ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಮೂರೂವರೆ ತಿಂಗಳೊಳಗೆ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗುವುದು ಎಂದರು.
ರಾಜ್ಯ ಸರಕಾರ ಬಡವರಿಗೆ, ಅಸಹಾಯಕರಿಗೆ ಅಗತ್ಯ ಚಿಕಿತ್ಸೆಯ ನೆರವಿಗೆ ಬದ್ಧವಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಮುಖ್ಯವಾಗಿ ರಕ್ತ ಪರೀಕ್ಷೆ, ಎಕ್ಸರೆ, ಎಮ್.ಆರ್.ಐ, ಶವಾಗಾರ ಸೇರಿದಂತೆ ಮುಖ್ಯ ಮತ್ತು ಅಗತ್ಯ ಸೌಲಭ್ಯಗಳು ಸಾರ್ವಜನಿಕರಿಗೆ ಸಿಗಬೇಕು. ಪ್ರಯೋಗಾಲಯ ಸ್ಥಾಪನೆ ಆಗಬೇಕು. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಸರಕಾರದ ಅನುದಾನದಲ್ಲಿ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೆ.ಎಸ್. ಬಸವಂತಪ್ಪ ಇದೇ ಸಂದರ್ಭದಲ್ಲಿ ಹೇಳಿದರು.




















