Home Advertisement
Home ಸುದ್ದಿ ರಾಜ್ಯ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

0
111

ಬೆಂಗಳೂರು: ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್‌ನಲ್ಲಿ ಮತ್ತೆ ನಿರಾಸೆಯಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಗೆ ತಡೆ ನೀಡುವಂತೆ ಹಾಗೂ ಜಾಮೀನು ಮಂಜೂರು ಮಾಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಕರ್ನಾಟಕ ಹೈಕೋರ್ಟ್‌ನ ದ್ವಿಸದಸ್ಯ ಪೀಠವು ಬುಧವಾರ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತು. ವಿನಯ್ ಕುಲಕರ್ಣಿ ಹಾಗೂ ಮತ್ತೋರ್ವ ಆರೋಪಿ ಚಂದ್ರಶೇಖರ್ ಇಂಡಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿತು.

ಇದರಿಂದ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ವಿನಯ್ ಕುಲಕರ್ಣಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಸದ್ಯ ಜೈಲಿನಲ್ಲಿರುವ ಅವರು ಶಿಕ್ಷೆಗೆ ತಡೆಯಾಜ್ಞೆ ಹಾಗೂ ಜಾಮೀನು ದೊರೆಯಬಹುದು ಎಂಬ ನಿರೀಕ್ಷೆಯಲ್ಲಿ ಇದ್ದರು. ಆದರೆ ವಿಚಾರಣೆ ಮುಂದೂಡಿಕೆಯಿಂದಾಗಿ ಅವರ ನಿರೀಕ್ಷೆ ಮತ್ತಷ್ಟು ಮುಂದೂಡಿಕೆಯಾಗಿದೆ.

ಶಾಸಕ ಸ್ಥಾನ ಅನರ್ಹ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಏಪ್ರಿಲ್ 13ರಂದು ತೀರ್ಪು ಪ್ರಕಟಿಸಿ, ವಿನಯ್ ಕುಲಕರ್ಣಿ ಸೇರಿ 16 ಮಂದಿಯನ್ನು ದೋಷಿಗಳೆಂದು ಘೋಷಿಸಿತ್ತು. ಬಳಿಕ ಏಪ್ರಿಲ್ 15ರಂದು ಕರ್ನಾಟಕ ವಿಧಾನಸಭೆ ಕಾರ್ಯದರ್ಶಾಲಯವು ವಿನಯ್ ಕುಲಕರ್ಣಿಯ ಶಾಸಕ ಸ್ಥಾನವನ್ನು ಅನರ್ಹಗೊಳಿಸಿ ಅಧಿಕೃತ ಪ್ರಕಟಣೆ ಹೊರಡಿಸಿತ್ತು.

ಪ್ರಕರಣದ ಹಿನ್ನೆಲೆ : 2016ರ ಜೂನ್ ತಿಂಗಳಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿಯ ವಿರುದ್ಧ ಆರೋಪ ಕೇಳಿಬಂದಿತ್ತು.

ಆ ಸಮಯದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಸಿಬಿಐ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು. ಹಲವು ವರ್ಷಗಳ ವಿಚಾರಣೆ ಬಳಿಕ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.