Home ಸುದ್ದಿ ರಾಜ್ಯ ಕರ್ನಾಟಕದಲ್ಲಿ ಮಳೆಯ ಅಬ್ಬರ: ಬೆಂಗಳೂರು ಸೇರಿ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮಳೆಯ ಅಬ್ಬರ: ಬೆಂಗಳೂರು ಸೇರಿ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

0

ಕಳೆದ ಕೆಲವು ದಿನಗಳಿಂದ ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಬಿಡುವು ನೀಡಿದ್ದ ಮಳೆ, ಈಗ ದಕ್ಷಿಣ ಕರ್ನಾಟಕ ಮತ್ತು ಮಲೆನಾಡು ಜಿಲ್ಲೆಗಳತ್ತ ತನ್ನ ದಿಕ್ಕನ್ನು ಬದಲಿಸಿದೆ. ಮುಂಬರುವ ದಿನಗಳಲ್ಲಿ ಈ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಅಕ್ಟೋಬರ್ 8, 9 ಮತ್ತು 10 ರಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಬೆಳಿಗ್ಗೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲಿ ಈಗಾಗಲೇ ಗಾಳಿ ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

ಹವಾಮಾನದ ಸ್ಥಿತಿ: ತಮಿಳುನಾಡಿನ ಕರಾವಳಿಯ ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುವ್ಯ ಚಂಡಮಾರುತದ ಮೇಲಿನ ಪರಿಚಲನೆಯು ಸಕ್ರಿಯವಾಗಿದೆ. ಇದು ದಕ್ಷಿಣ ತಮಿಳುನಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಪರಿಣಾಮ ಬೀರುತ್ತಿದ್ದು, ಕರ್ನಾಟಕದ ಮೇಲೆ ಮಳೆ ಮೋಡಗಳ ಚಲನೆಗೆ ಕಾರಣವಾಗಿದೆ. ಆಂಧ್ರಪ್ರದೇಶದ ಕರಾವಳಿಯಿಂದ ಕೊಮೊರಿನ್ ಪ್ರದೇಶದವರೆಗೆ ವಿಸ್ತರಿಸಿರುವ ತಗ್ಗು ಪ್ರದೇಶವೂ ಮಳೆಗೆ ಪೂರಕವಾಗಿದೆ.

ಇಂದು ಮಳೆ ಎಲ್ಲೆಲ್ಲಿ?: ಕರಾವಳಿ ಪ್ರದೇಶದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದ್ದರೆ, ದಕ್ಷಿಣ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಜೋರಾದ ಗಾಳಿ ಸಹಿತ ಸಾಧಾರಣ ಮಳೆಯಾಗಬಹುದು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ವಿಜಯನಗರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ನಿರೀಕ್ಷೆಯಿದೆ.

ಮುಂಬರುವ ದಿನಗಳ ಮುನ್ಸೂಚನೆ: ಅಕ್ಟೋಬರ್ 7 ರಂದು ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಯಿದ್ದು, ಕಲ್ಯಾಣ ಕರ್ನಾಟಕ ಮತ್ತು ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ.

ಕರಾವಳಿ ಹೊರತುಪಡಿಸಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಕೋಲಾರ ಜಿಲ್ಲೆಗಳಲ್ಲಿ ಭಾರೀ ಗಾಳಿ (30 ರಿಂದ 40 ಕಿ.ಮೀ) ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಕೆಲವೆಡೆ ಲಘು ಮಳೆಯಾಗುವ ನಿರೀಕ್ಷೆಯಿದೆ.

ಅಕ್ಟೋಬರ್ 10 ರಂದು ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರಿನ ಹವಾಮಾನ: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 20°C ಇರಬಹುದು.

ಇತ್ತೀಚೆಗೆ ಚಾಮರಾಜನಗರ ಮತ್ತು ಬೇಗೂರಿನ ಸುತ್ತಮುತ್ತ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಹಲವು ತಿಂಗಳುಗಳಿಂದ ಕೇವಲ ತುಂತುರು ಮಳೆಗೆ ಸೀಮಿತವಾಗಿದ್ದ ಈ ಪ್ರದೇಶಗಳಲ್ಲಿ ಇದೀಗ ಜೋರು ಮಳೆಯಾಗುತ್ತಿರುವುದು ವಾತಾವರಣವನ್ನು ತಂಪಾಗಿಸಿದೆ. ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಿ.ಕಣಬೂರಿನಲ್ಲಿ 90.5 ಮಿಮೀ, ಕೊಪ್ಪಳದ ಕನಕಗಿರಿ 1ರಲ್ಲಿ 84.8 ಮಿಮೀ, ಕಲಬುರಗಿಯ ಉಡಚಣದಲ್ಲಿ 79.0 ಮಿಮೀ, ಬೆಂಗಳೂರು ಗ್ರಾಮಾಂತರದ ಹಸಿರುವಳ್ಳಿಯಲ್ಲಿ 77.5 ಮಿಮೀ ಮತ್ತು ಮಂಡ್ಯದ ಕಗ್ಗಲಿಪುರದಲ್ಲಿ 75.0 ಮಿಮೀ ಮಳೆ ದಾಖಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version