ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ಸಿಗೆ ಬೆಂಕಿ ಕಾಣಿಸಿಕೊಂಡು ಇಡೀ ಬಸ್ ಅಗ್ನಿಗಾಹುತಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಈ ಘಟನೆ ಸಂಭವಿಸಿದ್ದು, ಇಡೀ ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಭಟ್ಕಳದಿಂದ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್ ಆರ್ ಟಿಸಿ ಡಿಪೋ ಬಳಿ ಬರುತ್ತಿದ್ದಂತೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಎಚ್ಚೆತ್ತ ಬಸ್ಸು ಚಾಲಕ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಬಸ್‌ನಲ್ಲಿ 12 ಜನ ಪ್ರಯಾಣಿಕರು ಇದ್ದರು ಎನ್ನಲಾಗಿದೆ, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.