ಬೆಂಗಳೂರು: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಜುಲೈ 16ರ ವರೆಗೆ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಸುರಿದಿರುವ ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕಾಗಿವೆ.
ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಮಳೆ ಆರ್ಭಟ ಇರಲಿದೆ. ಕೇರಳ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ಸಮುದ್ರಭಾಗದಲ್ಲಿ ಸೃಷ್ಟಿಯಾಗಿರುವ ಟ್ರಫ್ ಕರ್ನಾಟಕದ ಮೇಲೂ ಪ್ರಭಾವ ಬೀರಿದೆ. ಆದ್ದರಿಂದ ಮಳೆಯಾಗಲಿದೆ.
ಜೂನ್ ಮೊದಲ ವಾರದಿಂದಲೇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಗದಗ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಹಾವೇರಿ, ಧಾರವಾಡ, ರಾಯಚೂರು, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಜುಲೈ 11ರಂದು ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಭಾಗದಲ್ಲೂ ಮಳೆ ಸುರಿಯುತ್ತಿದ್ದು, ಸದ್ಯಕ್ಕೆ ಮಳೆ ಬಿಡುವು ಕೊಡುವ ಮುನ್ಸೂಚನೆ ಇಲ್ಲ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಆಗಾಗ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಜೊತೆ 40-50 ಕಿ.ಮೀ. ವೇಗದೊಂದಿಗೆ ನಿರಂತರವಾಗಿ ಗಾಳಿ ಬೀಸಲಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20 ಡಿಗ್ರಿ ಸೆಲ್ಸಿಯಸ್ ಮತ್ತು 30 ಡಿಗ್ರಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಗದಗ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಹಾವೇರಿ, ಧಾರವಾಡ, ರಾಯಚೂರು, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಜುಲೈ 11ರಂದು ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.
ಕಾವೇರಿ ನದಿ ಪಾತ್ರದಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಜಲಾಶಯ ಈಗಾಗಲೇ ಭರ್ತಿಯಾಗಿದೆ. ತುಂಗಭದ್ರಾ ಡ್ಯಾಂ ಭರ್ತಿಯಾಗುವ ಹಂತದಲ್ಲಿದೆ. ಮಳೆಯ ಅರ್ಭಟದ ಹಿನ್ನಲೆಯಲ್ಲಿ ಪ್ರವಾಸಿಗರು ಧುಮ್ಮಿಕ್ಕುವ ಜಲಪಾತಗಳನ್ನು ನೋಡಲು ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಜಿಲ್ಲಾಡಳಿತ ಮತ್ತು ಪೊಲೀಸರು ಹಾಗೂ ಸ್ಥಳೀಯ ಜನರು ನೀಡುವ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು ಎಂದು ಜಿಲ್ಲಾಡಳಿತಗಳು ಮನವಿ ಮಾಡಿವೆ.