ಬೇಕು, ಬೇಕು ನ್ಯಾಯ ಬೇಕು. ತಮ್ಮ ಕನಿಷ್ಠ ಸಂಬಳ ಹಾಗೂ ಬೇಡಿಕೆ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರು ಬೀದಿಗೆ ಇಳಿದಿದ್ದಾರೆ. ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಿನ್ನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಣ್ಣ ಸಣ್ಣ ಮಕ್ಕಳ ಜೊತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಅವರಿಗೆ ಸ್ಪಂದಿಸುವರೆಗೆ ಅವರು ಪ್ರತಿಭಟನೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ರಾಜಧಾನಿ ಬೆಂಗಳೂರಿಗೆ ವಿವಿಧ ಜಿಲ್ಲೆಯಿಂದ ಆಶಾ ಕಾರ್ಯಕರ್ತೆಯರು ಆಗಮಿಸಿದ್ದಾರೆ. ಇಂತಹ ಮೈಕೊರೆಯುವ ಚಳಿಯಲ್ಲಿ ರಾತ್ರಿಯಿಡೀ ಧರಣಿ ಕುಳಿತುಕೊಂಡಿದ್ದಾರೆ. ಇವರ ಪ್ರತಿಭಟನೆ ಇಂದು 2ನೇ ದಿನಕ್ಕೆ ಕಾಲಿಟ್ಟಿದ್ದು, ಮಾಸಿಕ ರಾಜ್ಯ ಸರ್ಕಾರದಿಂದ ಗೌರವ ಧನವನ್ನು15,000 ಸಾವಿರ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.
ಗೌರವಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಸರ್ಕಾರ ಸ್ಪಂದಿಸುತ್ತಿಲ್ಲ. ವೇತನ ಹೆಚ್ಚಿಸುವ ಬದಲಾಗಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ.
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸರ್ಕಾರ ಯಾವ ರೀತಿ ಸ್ಪಂದಿಸಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ. ತಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಹೋರಾಟ ನಿರಂತರ ಸಂಘಟನೆ ಎಚ್ಚರಿಕೆ ನೀಡಿದೆ.





















