ಬೆಂಗಳೂರು: “ನೋಟಿಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್‌ಟಿ ನೋಂದಣಿ ಮಾಡಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸಣ್ಣ-ಪುಟ್ಟ ವ್ಯಾಪಾರಿಗಳಿಗೆ ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೋಟಿಸ್ ರಾಜ್ಯಾದ್ಯಂತ ಚರ್ಚೆಯ ವಿಚಾರ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, “ವ್ಯಾಪಾರ ವಹಿವಾಟುಗಳನ್ನು ನಡೆಸಲು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ” ಎಂದರು.
“ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18 ಸಾವಿರ ನೋಟಿಸ್ ಜಾರಿಗೊಳಿಸಲಾಗಿದೆ. ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ, ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು” ಎಂದು ಹೇಳಿದರು.
“ಯುಪಿಐ ಅಡಿ ವಾರ್ಷಿಕ ರೂ. 40 ಲಕ್ಷ ರೂ.ಗಳಿಗೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್‌ಟಿ ನೋಟಿಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್‌ಟಿ ನೋಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. ಸದ್ಯ ನೋಟಿಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ” ಎಂದರು.
ಪ್ರತಿಭಟನೆ ಹಿಂದಕ್ಕೆ: ಜಿಎಸ್‌ಟಿ ನೋಟಿಸ್ ಜುಲೈ 24ರೊಳಗೆ ವಾಪಸ್ ಪಡೆಯಬೇಕು, ಇಲ್ಲವಾದಲ್ಲಿ ಜುಲೈ 25ರಂದು ಚಿಕ್ಕಪುಟ್ಟ ಅಂಗಡಿ, ಕಾಂಡಿಮೆಂಟ್ಸ್, ಬೇಕರಿ ಮುಂತಾದವುಗಳ ವ್ಯಾಪಾರ ವಹಿವಾಟು ಬಂದ್ ಮಾಡುವುದಾಗಿ ಘೋಷಣೆ ಮಾಡಲಾಗಿತ್ತು.
ಆದರೆ ಈ ಬಂದ್ ಕರೆಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಮುಖ್ಯಮಂತ್ರಿಗಳು ಸಣ್ಣ ವ್ಯಾಪಾರಸ್ಥರ ಬೆಂಬಲಕ್ಕೆ ನಿಂತಿದ್ದು, ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ.
ಅಹವಾಲು ಸಲ್ಲಿಕೆ: ಜಿಎಸ್‌ಟಿ ನೋಟಿಸ್ ವಿಷಯಕ್ಕೆ ಸಂಬಂಧಿಸಿದಂತೆ ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು. ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್ಟಿ ನೋಟಿಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ ಎಂದು ಹೇಳಿದ್ದಾರೆ.
ʼಜಿಎಸ್ಟಿ ನೊಟೀಸ್ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕುʼ ಜಿಎಸ್ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.