ಬೆಂಗಳೂರು: “ರಮ್ಯಾ ನಿಮ್ಮ ನಿಲುವು ಸರಿಯಿದೆ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ” ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ನಿಮ್ಮ ನಿಲುವು ಸರಿಯಿದೆ ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ. ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ, ಅದನ್ನು ನಾವು ಸಹಿಸಬಾರದು” ಎಂದು ನಟ ಶಿವಣ್ಣ ಹೇಳಿದ್ದಾರೆ.
“ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ – ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ.” ಇಂತಿ ನಿಮ್ಮ ಶಿವರಾಜ್‌ಕುಮಾರ್, ಗೀತಾ ಶಿವರಾಜ್‌ಕುಮಾರ್ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
“ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ” ಎಂದು ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿಕೊಂಡಿದ್ದರು. ಇದರಿಂದಾಗಿ ದರ್ಶನ್ ಅಭಿಮಾನಿಗಳು ರಮ್ಯಾ ವಿರುದ್ಧ ಆಕ್ರೋಶ ಹೊರಹಾಕಲು ಆರಂಭಿಸಿದರು.
ಬಳಿಕ ದರ್ಶನ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಕೂಡ ಕಿಡಿಕಾರಿದ್ದಾರೆ. ದರ್ಶನ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಅಶ್ಲೀಲ ಸಂದೇಶಗಳನ್ನು ಉಲ್ಲೇಖಿಸಿ ನಟಿ ರಮ್ಯಾ ಕಿಡಿಕಾರಿದ್ದಾರೆ. ರೇಣುಕಾಸ್ವಾಮಿ ಮೇಸೆಜ್‌ಗಳಿಗೂ ಡಿ-ಬಾಸ್ ಕೆಲ ಅಭಿಮಾನಿಗಳಿಗೂ ವ್ಯತ್ಯಾಸವಿಲ್ಲ. ಸ್ತ್ರೀ ವಿರೋಧಿ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.
ಅಲ್ಲದೇ ರೇಣುಕಾಸ್ವಾಮಿ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಎನ್ನುವುದಕ್ಕೆ ನಿಮ್ಮ ಕಮೆಂಟ್ಸ್‌ಗಳೇ ಸಾಕ್ಷಿ. ಮಹಿಳೆಯರ ಬಗ್ಗೆ ಇಂಥ ಕೀಳು ಮನಸ್ಥಿತಿ ಹೊಂದಿರುವುದರಿಂದಲೇ ಅವರ ಮೇಲೆ, ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಮತ್ತೊಂದು ಪೋಸ್ಟ್‌ನಲ್ಲಿಯೂ ರಮ್ಯಾ ಹಂಚಿಕೊಂಡಿದ್ದರು.
ರಾಜ್ಯ ಮಹಿಳಾ ಆಯೋಗದಿಂದ ಪತ್ರ: ನಟಿ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳಿಸಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಮಹಿಳಾ ಆಯೋಗ ಪೊಲೀಸ್ ಆಯುಕ್ತರಿಗೆ ಸೋಮವಾರ ಪತ್ರ ಬರೆದಿತ್ತು. ಈ ಕಮೆಂಟ್ ಮಾಡಿದವರ ವಿರುದ್ಧ ರಮ್ಯಾ ಕಾನೂನು ಹೋರಾಟವನ್ನು ಆರಂಭಿಸಿದ್ದಾರೆ.
ಮಹಿಳಾ ಆಯೋಗ ಮಾಜಿ ಸಂಸದೆ ಹಾಗೂ ನಟಿ ರಮ್ಯಾರವರ ವಿರುದ್ಧ, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ನೀಡಿರುವ ಬಗ್ಗೆ ವರದಿಯಾಗಿರುತ್ತದೆ. ಇದರಿಂದ ಮಹಿಳೆಯ ಸ್ಥಾನಮಾನಕ್ಕೆ ತೊಂದರೆಯಾಗುತ್ತಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿರುತ್ತದೆ. ಆದ್ದರಿಂದ ಸದರಿ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಿ. ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದೆ. ಈ ಪತ್ರವನ್ನು ರಮ್ಯಾ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.