ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬಿಎನ್ಎಸ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಮತ್ತು ಈ ಸಂಬಂಧ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ಈ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
ಆಂತರಿಕ ಭದ್ರತಾ ವಿಭಾಗ ಪೊಲೀಸ್ ಮಹಾ ನಿರ್ದೇಶಕ ಡಾ. ಪ್ರಣವ ಮೊಹಾಂತಿ ಅವರ ನೇತೃತ್ವದಲ್ಲಿ, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಕ ಎಂ.ಎನ್. ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತಂಡದಲ್ಲಿದ್ದಾರೆ.
ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದು, ವ್ಯಕ್ತಿಯ ಹೇಳಿಕೆಯಲ್ಲಿ ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ ಹತ್ಯೆ ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ, ತಿಳಿಸಲಾಗಿದೆ.
ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು/ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸುವಂತೆ ವಿವಿಧ ಕಡೆಯಿಂದ ಸರಕಾರದ ಮೇಲೆ ಒತ್ತಡ ತರಲಾಗಿತ್ತು.
ಈ ಕುರಿತಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷರು ಕೂಡ ಎಸ್‌ಐಟಿ ರಚಿಸುವಂತೆ ಸರಕಾರಕ್ಕೆ ಪತ್ರ ಬರೆದಿದ್ದರು. ಪ್ರಕರಣದ ಗಂಭೀರತನ್ನು ಪರಿಗಣಿಸಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡ ರಚಿಸಿದ್ದು, ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಲು ತಿಳಿಸಿದೆ.