ಹಾವೇರಿ: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಹಾವೇರಿ ಜಿಲ್ಲೆಯಾದ್ಯಂತ ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಿಗ್ಗೆ ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ, ಕರವೇ ಗಜಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿದವು.
ಹಾವೇರಿ ಕೇಂದ್ರೀಯ ಬಸ್ ನಿಲ್ದಾಣದಿಂದ ಹೊರಡುವ ಸಾರಿಗೆ ಬಸ್ ಗಳನ್ನು ತಡೆದ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಬೆಳಿಗ್ಗೆ ಕೆಲಕಾಲ ಸಾರಿಗೆ ಬಸ್ ಮತ್ತು ಆಟೊ ಸಂಚಾರದಲ್ಲಿ ವ್ಯತ್ಯಯವಾಯಿತು.ಆನಂತರ ಎಂದಿನಂತೆ ಬಸ್ ಮತ್ತು ಆಟೊ ಸಂಚಾರ ಆರಂಭಗೊಂಡಿತು. ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಮಾತ್ರ ಕೆಲ ವ್ಯಾಪಾರಿಗಳು ಕೆಲಕಾಲ ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿ, ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು.
ಉಳಿದ ಎಲ್ಲ ಕಡೆ ಅಂಗಡಿಗಳ ಬಾಗಿಲು ತೆರೆದಿದ್ದು, ವ್ಯಾಪಾರ ವಹಿವಾಟು ನಡೆದವು. ಮಾರುಕಟ್ಟೆಗಳಲ್ಲಿ ವ್ಯಾಪಾರ ಎಂದಿನಂತೆಯೇ ನಡೆಯಿತು. ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಿದವು. ರೈತ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದರೂ, ಬೀದಿಗಿಳಿದು ಪ್ರತಿಭಟನೆ ನಡೆಸಲಿಲ್ಲ. ಸುಮಾರು 75ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದು ಬಳಿಕ ಬಿಟ್ಟು ಕಳುಹಿಸಿದರು.